ಪೊಲೀಸ್ ಸಿಬ್ಬಂದಿಗಳ ಆತ್ಮಹತ್ಯೆ ಪ್ರಕರಣ ವರದಿ ಆಧರಿಸಿ ಕ್ರಮ: ಸಿದ್ದರಾಮಯ್ಯ

ಬೆಂಗಳೂರು, ಜು.22: ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್‌ಕರ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಆ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶುಕ್ರವಾರ ನಗರದ ಮುಖ್ಯಮಂತ್ರಿ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಆಗಬೇಕಾಗಿರುವ ಸುಧಾರಣೆಗಳ ಕುರಿತಂತೆ ನಿವೃತ್ತ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್‌ಕರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ವರದಿಯನ್ನು ಆಧರಿಸಿ ಪೊಲೀಸ್ ಸಿಬ್ಬಂದಿಗಳ ಆತ್ಮಹತ್ಯೆ ಪ್ರಕರಣಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಇತ್ತೀಚೆಗೆ ಡಿವೈಎಸ್ಪಿ ಗಣಪತಿ ಹಾಗೂ ಕಲ್ಲಪ್ಪ ಆತ್ಮಹತ್ಯೆ ಶರಣಾಗಿದ್ದರು. ಇದರ ಬೆನ್ನಲ್ಲೆ ರಾಜ್ಯಾದ್ಯಂತ ಹಲವು ಆತ್ಮಹತ್ಯೆ ಪ್ರಕರಣಗಳು ನಡೆದಿವೆ. ಹೀಗಾಗಿ ಇದು ಗಂಭೀರ ವಿಷಯವಾಗಿದ್ದು, ರಾಘವೇಂದ್ರ ಔರಾದ್‌ಕರ್ ವರದಿ ಬಂದಕೂಡಲೆ ಸೂಕ್ತವಾದ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.





