ಬಂಟ್ವಾಳ: ಅಕ್ರಮ ಮದ್ಯ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಆಗ್ರಹ

ಬಂಟ್ವಾಳ, ಜು. 24: ತಾಲೂಕಿನ ಬಹತೇಕ ಗೂಡಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು ಇದನ್ನು ತಡೆಗಟ್ಟಲು ಅಬಕಾರಿ ಇಲಾಖೆಯ ಜೊತೆ ಪೊಲೀಸ್ ಇಲಾಖೆ ಕೈಜೋಡಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಭೆಯಲ್ಲಿ ಒತ್ತಾಯ ಕೇಳಿ ಬಂತು.
ರವಿವಾರ ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ ಮತ್ತು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಂಟ್ವಾಳ ನಗರ ಠಾಣೆಯಲ್ಲಿ ನಡೆದ ಕುಂದು ಕೊರತೆಗಳ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಾಯಿತು.
ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಕುಡಿದ ವ್ಯಕ್ತಿಗಳಿಂದ ತೊಂದರೆಯಾಗುವ ಹೆಚ್ಚಿನ ಅವಕಾಶಗಳಿರುವುದರಿಂದ ಇದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಲಾಯಿತು. ಈ ಬಗ್ಗೆ ಅಬಕಾರಿ ಇನ್ಸ್‌ಪೆಕ್ಟರ್ ಸುಬ್ರಮಣ್ಯ ಮಾತನಾಡಿ, ಅಂತಹ ಪ್ರಕರಣಗಳು ಕಂಡುಬಂದಲ್ಲಿ ತಮ್ಮ ಗಮನಕ್ಕೆ ತಂದರೆ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.
ಅನಧಿಕೃತ ಪಾರ್ಕಿಂಗ್ ಮತ್ತು ಅಡ್ಡಾದಿಡ್ಡಿಯಾದ ಪಾರ್ಕಿಂಗ್‌ನಿಂದಾಗಿ ಬಿಸಿರೋಡ್ ಮತ್ತು ಬಂಟ್ವಾಳ ಬಡ್ಡಕಟ್ಟೆಯಲ್ಲಿ ಟ್ರಾಫಿಕ್ ಸಮಸ್ಯೆ ಇನ್ನೂ ಕೂಡ ಮುಗಿದಿಲ್ಲ. ಟ್ರಾಫಿಕ್ ಪೊಲೀಸ್ ಇದ್ದರೂ ಅವರಿಗೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಸಭೆಯಲ್ಲಿ ಚರ್ಚೆಯಾಗುತ್ತಿಯಾದರೂ ಸಮಸ್ಯೆ ಪರಿಹಾರವಾಗುವ ಲಕ್ಷಣ ಕಂಡು ಬರುತ್ತಿಲ್ಲ ಎಂದು ಸಬೆಯಲ್ಲಿ ಕೇಳಿ ಬಂತು.
ಈ ಬಗ್ಗೆ ಮಾತನಾಡಿದ ಬಂಟ್ವಾಳ ವೃತ್ತ ನಿರೀಕ್ಷಕ ಮಂಜಯ್ಯ, ಈಗಾಗಲೇ ಜಿಲ್ಲಾ ಎಸ್ಪಿ ಇಲ್ಲಿನ ಟ್ರಾಫಿಕ್ ಸಮಸ್ಯೆಯ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡುತ್ತಿದ್ದಾರೆ. ಕೆಲವೆ ದಿನಗಳಲ್ಲಿ ಸಾಧಾರಣ ಮಟ್ಟಿನ ಟ್ರಾಫಿಕ್ ಸಮಸ್ಯೆಯಿಂದ ಮುಕ್ತಿ ಸಿಗಬಹುದು. ಅದಕ್ಕೆ ಎಲ್ಲರ ಸಹಕಾರ ಕೂಡಾ ಅಗತ್ಯವಿದೆ ಎಂದರು.
ಪುದು ಗ್ರಾಮದ ಕುಮ್ಡೇಲು ಎಂಬಲ್ಲಿ ಬೀದಿ ದೀಪಗಳನ್ನು ಅಳವಡಿಸಲು ಸ್ಥಳೀಯ ಗ್ರಾಪಂಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಗ್ರಾಪಂಗೆ ನೋಟಿಸ್ ನೀಡಬೇಕು ಎಂದು ಸ್ಥಳೀಯ ನಾಗರಿಕರೊಬ್ಬರು ಆಗ್ರಹಿಸಿದರು.
ಸಭೆಯಲ್ಲಿ ನಗರ ಠಾಣಾ ಎಸೈ ನಂದಕುಮಾರ್, ಬಂಟ್ವಾಳ ಗ್ರಾಮಾಂತರ ಠಾಣಾ ಎಸೈ ರಕ್ಷಿತ್ ಗೌಡ, ಟ್ರಾಫಿಕ್ ಎಸೈ ಚಂದ್ರಶೇಖರಯ್ಯ ಉಪಸ್ಥಿತರಿದ್ದರು.







