ಅಮಾಯಕ ರೈತರ ಬಿಡುಗಡೆ: ಸಿಎಂ ಸಿದ್ದರಾಮಯ್ಯ
ರಾಘವೇಂದ್ರ ಔರಾದ್ಕರ್ ನೇತೃತ್ವದಲ್ಲಿ ಪರಿಶೀಲನಾ ತಂಡ ರಚನೆ

ಬೆಂಗಳೂರು, ಆ.3: ಮಹಾದಾಯಿ ನ್ಯಾಯಾಧೀಕರಣದ ತೀರ್ಪನ್ನು ವಿರೋಧಿಸಿ ಕೈಗೊಂಡ ಪ್ರತಿಭಟನೆಯ ವೇಳೆ ಬಂಧನಕ್ಕೊಳಗಾಗಿರುವ 187ಮಂದಿಯಲ್ಲಿ ಅಮಾಯಕರನ್ನು ಬಿಡುಗಡೆಗೊಳಿಸಲು ಹಿರಿಯ ಪೊಲೀಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದಲ್ಲಿ ಪರಿಶೀಲನಾ ತಂಡ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ನ್ಯಾಯಾಧೀಕರಣದ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ 187ಮಂದಿಯನ್ನು ಬಂಧಿಸಲಾಗಿದ್ದು, ಇದರಲ್ಲಿ ವೃದ್ಧರು, ವಿದ್ಯಾರ್ಥಿಗಳು ಹಾಗೂ ಅಮಾಯಕರಿದ್ದರೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಗಂಭೀರ ಪ್ರಕರಣಗಳ ಪರಿಶೀಲನೆ: ಮಹಾದಾಯಿ ನ್ಯಾಯಾಧೀಕರಣದ ತೀರ್ಪನ್ನು ವಿರೋಧೀಸಿ ನಡೆದ ಪ್ರತಿಭಟನೆಯ ವೇಳೆ ಕೆಲವರು ಅತಿರೇಕವಾಗಿ ವರ್ತಿಸಿದ್ದಾರೆ. ಹೀಗಾಗಿ ಅವರ ಮೇಲೆ ಗಂಭೀರ ಪ್ರಕರಣಗಳು ದಾಖಲಾಗಿದ್ದು, ಇದನ್ನು ಬದಲಾಯಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನವಲಗುಂದ ತಾಲೂಕಿನ ಯಮನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪೊಲೀಸರು ನಡೆಸಿದ ದೌರ್ಜನ್ಯ ಹಾಗೂ ಪ್ರತಿಭಟನೆ ವೇಳೆ ಉದ್ರಿಕ್ತರಿಂದ ನಡೆದ ಕಲ್ಲು ತೂರಾಟ ಪ್ರಕರಣವನ್ನು ಹಿರಿಯ ಪೊಲೀಸ್ ಅಧಿಕಾರಿ ಕಮಲ್‌ಪಂಥ್ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.
ವಿಷಾಧಿಸುತ್ತೇನೆ
ಮಹಾದಾಯಿ ನ್ಯಾಯಾಧೀಕರಣದ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಅಮಾಯಕರ ಮೇಲೆ ದೌರ್ಜನ್ಯ ಎಸಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ. ಈ ಬಗ್ಗೆ ತನಿಖಾ ತಂಡವನ್ನು ರಚಿಸಿದ್ದು, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇನೆ.
-ಸಿದ್ದರಾಮಯ್ಯ ಮುಖ್ಯಮಂತ್ರಿ





