ಜಂತುಹುಳ ನಿವಾರಣಾ ಕಾರ್ಯಕ್ರಮಕೆ್ಕ ಚಾಲನೆ

ಚಿಕ್ಕಮಗಳೂರು, ಆ.10: ವಿದ್ಯಾರ್ಥಿಗಳು ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಉತ್ತಮ ಆರೋಗ್ಯ ಹೊಂದಿ ಶೈಕ್ಷಣಿಕವಾಗಿ ಉನ್ನತ ಸಾಧನೆ ಮಾಡುವುದರೊಂದಿಗೆ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಪಂ ಅಧ್ಯಕ್ಷೆ ಬಿ.ಎಸ್.ಚೈತ್ರಾಶ್ರೀ ತಿಳಿಸಿದ್ದಾರೆ.
ಅವರು ಇಂದು ನಗರದ ಗೃಹಮಂಡಳಿ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಂತುಹುಳ ನಿವಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಆರೋಗ್ಯವಂತರಾಗಿರಬೇಕು. ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯ ಹೊಂದಲು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳ ಸದುಪಯೋಗ ಪಡೆದು ಉತ್ತಮ ಶಿಕ್ಷಣ ಪಡೆಯುವ ಮೂಲಕ ಊರಿಗೆ, ಶಾಲೆಗೆ, ಹೆತ್ತವರಿಗೆ ಒಳ್ಳೆಯ ಹೆಸರು ತರಬೇಕು ಎಂದು ಕಿವಿಮಾತು ಹೇಳಿದರು.
ಜಿಪಂ ಉಪಾಧ್ಯಕ್ಷ ರಾಮಸ್ವಾಮಿ ಶೆಟ್ಟಿಗದ್ದೆ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಶುಚಿತ್ವ ಕಾಪಾಡುವುದಕ್ಕೆ ಹೆಚ್ಚು ಒತ್ತು ನೀಡಬೇಕು. ಇದರಿಂದಾಗಿ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದರು.
ಸರಕಾರ ಸಾರ್ವಜನಿಕರು ಉತ್ತಮ ಆರೋಗ್ಯ ಹೊಂದಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಜಂತುಹುಳ ನಿವಾರಣೆ ಮಾಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗೃಹ ಮಂಡಳಿ ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಲಲಿತಮ್ಮ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಯೋಜನಾ ನಿರ್ವಾಹಕ ಡಾ.ಎಂ.ಎಚ್.ರವೀಂದ್ರನಾಥ್, ಡಾ.ಕಲ್ಪನಾ, ಲೋಕೇಶ್, ಚೇತನ್, ಬಾಲಕೃಷ್ಣ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿ, ಜಲಜಾಕ್ಷಿ ಸ್ವಾಗತಿಸಿ, ಕಾಂತರಾಜು ನಿರೂಪಿಸಿ, ಹಾಲಮ್ಮ ವಂದಿಸಿದರು.







