ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಎಡಿಸಿ ಸಲಹೆ

ಮಡಿಕೇರಿ, ಆ.10: ಜಂತುಹುಳ ಬಾಧೆಯಿಂದ ರಕ್ತಹೀನತೆ, ಅಪೌಷ್ಟಿಕತೆ ಉಂಟಾಗಿ ದೈಹಿಕ ಬೆಳವಣಿಗೆ ಕುಂಠಿತವಾಗುವುದರಿಂದ ಜಂತುಹುಳು ದೇಹಕ್ಕೆ ಪ್ರವೇಶವಾಗದಂತೆ ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಸಲಹೆ ನೀಡಿದ್ದಾರೆ. ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಬ್ಬರೂ ಆರೋಗ್ಯಯುತರಾಗಿದ್ದಲ್ಲಿ ಸದೃಢ ಸಮಾಜ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಜಂತುಹುಳ ದೇಹಕ್ಕೆ ಪ್ರವೇಶ ಮಾಡುವುದರಿಂದ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಈ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಲಾಖೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್.ಬಸವರಾಜು ಮಾತನಾಡಿ, ಮಕ್ಕಳಲ್ಲಿ ಅಪೌಷ್ಟಿಕತೆ ತಡೆಯುವ ನಿಟ್ಟಿನಲ್ಲಿ ಸರಕಾರ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವುಗಳ ಜೊತೆಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡಲಾಗುತ್ತದೆ ಎಂದರು.
ಕಾರ್ಯಕ್ರಮ ಅಧಿಕಾರಿ ಡಾ.ದೇವಿ ಆನಂದ್ ಮಾತನಾಡಿ, 1ರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಲ್ಲಿ ನೀಡಲಾಗುತ್ತದೆ. ಶಾಲೆಯಿಂದ ಹೊರಗಿರುವವರಿಗೆ ಅಂಗನವಾಡಿ ಮೂಲಕ ಜಂತುಹುಳ ನಿವಾರಣಾ ಮಾತ್ರೆ ನೀಡಲಾಗುತ್ತದೆ ಎಂದು ತಿಳಿಸಿದರು.
ದೇಶದಲ್ಲಿ 10ರಲ್ಲಿ 7 ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಜಂತುಹುಳ ಕಾರಣವಾಗಿದೆ. ಆದ್ದರಿಂದ ಜಂತುಹುಳ ನಿವಾರಣೆ ಮಾಡುವ ನಿಟ್ಟಿನಲ್ಲಿ ಅರಿವು ಮೂಡಿಸಲಾಗುತ್ತದೆ ಎಂದರು. ಈ ಸಂದರ್ಭ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚಿಕ್ಕಬಸವಯ್ಯ, ಡಾ.ಆಶಾ, ಬಿ.ಸಿದ್ದರಾಜು, ಸ್ವಾಮಿ, ಕಿರಣ್ ಕುಮಾರ್, ದಯಾನಂದ, ಮತ್ತಿತರರು ಉಪಸ್ಥಿತರಿದ್ದರು.







