ಜಾಮೀನಿಗೆ ಆರೋಪಿ ಪ್ರವೀಣ್ ಖಾಂಡ್ಯ ಅರ್ಜಿ
ಡಿವೈಎಸ್ಪಿ ಕಲ್ಲಪ್ಪ ಆತ್ಮಹತ್ಯೆ ಪ್ರಕರಣ
ಬೆಂಗಳೂರು, ಆ.10: ಚಿಕ್ಕಮಗಳೂರಿನ ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಶ್ವಹಿಂದೂ ಪರಿಷತ್ ಶಿವಮೊಗ್ಗ ವಿಭಾಗೀಯ ಸಂಚಾಲಕ ಪ್ರವೀಣ್ ಖಾಂಡ್ಯ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸೇಗೌಡ ಅವರಿದ್ದ ನ್ಯಾಯಪೀಠವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಿ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿದೆ.
ಪ್ರಕರಣದಲ್ಲಿ ನಮ್ಮ ಕಕ್ಷಿದಾರರ ಪಾತ್ರವಿಲ್ಲ. ಈಗಾಗಲೇ ಸಿಐಡಿ ಅಧಿಕಾರಿಗಳು ಬಹುತೇಕ ತನಿಖೆ ಪೂರ್ಣಗೊಳಿಸಿದ್ದಾರೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಹಾಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಅರ್ಜಿಯಲ್ಲಿ ಕೋರಿದ್ದಾರೆ.
ಪ್ರಕರಣದ ಹಿನ್ನೆಲೆ: ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್‌ಆತ್ಮಹತ್ಯೆ ಹಾಗೂ ಎಚ್.ಎಂ.ತೇಜಸ್ ಅಪಹರಣ ಪ್ರಕರಣದಲ್ಲಿ ಪ್ರವೀಣ್ ಖಾಂಡ್ಯ ಪ್ರಮುಖ ಆರೋಪಿಯಾಗಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ ಪ್ರವೀಣ್ ನಿರೀಕ್ಷಣಾ ಜಾಮೀನು ಕೋರಿ ಚಿಕ್ಕಮಗಳೂರಿನ 2ನೆ ಹೆಚ್ಚುವರಿ ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ. ವಿಚಾರಣೆ ನಡೆಸಿದ್ದ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಈ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.





