ಬಾಂಗ್ಲಾ ದೇಶಿಗರಿಗೆ ಆಶ್ರಯ ನೀಡಿದರೆ ಕಠಿಣ ಕ್ರಮ: ಎಸ್ಪಿ ರಾಜೇಂದ್ರ ಪ್ರಸಾದ್ ಎಚ್ಚರಿಕೆ
ಫಾರಿನ್ ಆಕ್ಟ್ ನಡಿ ಕಾನೂನು ಕ್ರಮ

ಮಡಿಕೇರಿ, ಆ.11: ಕೊಡಗು ಜಿಲ್ಲಾ ವ್ಯಾಪ್ತಿಯ ಕಾಫಿ ತೋಟಗಳು ಸೇರಿದಂತೆ ವಿವಿಧೆಡೆಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಕಾರ್ಮಿಕರನ್ನಾಗಿ ಬಳಸಿಕೊಂಡಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮ ಹಂತವಾಗಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕಾಫಿ ತೋಟಗಳಿಗೆ ಪೊಲೀಸ್ ಸಿಬ್ಬಂದಿ ತೆರಳಿ ಅಲ್ಲಿನ ಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭ ತೋಟದ ಮಾಲಕರು ತಮ್ಮ ಕಾರ್ಮಿಕರ ಬಗ್ಗೆ ಸ್ಪಷ್ಟ ಮತ್ತು ನಿರ್ದಿಷ್ಟ ಮಾಹಿತಿಗಳನ್ನು ಒದಗಿಸಬೇಕು. ಮೊದಲ ಹಂತದ ಪರಿಶೀಲನೆಯ ಬಳಿಕ ಹೋಂ ಸ್ಟೇ ಮತ್ತು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿರುವ ಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಎಸ್ಪಿ ಸ್ಪಷ್ಟಪಡಿಸಿದರು.
ತಮ್ಮ ತೋಟಗಳಲ್ಲಿ ಕಾರ್ಮಿಕರನ್ನು ಬಳಸಿಕೊಳ್ಳುವ ಸಂದರ್ಭ ಅವರ ಪೂರ್ಣ ಮಾಹಿತಿಯನ್ನು ಪಡೆದುಕೊಳ್ಳುವುದು ತೋಟಗಳ ಮಾಲಕರ ಕರ್ತವ್ಯವಾಗಿರುತ್ತದೆ. ಅಗತ್ಯ ಮಾಹಿತಿಗಳಿಲ್ಲದೆ ಅಕ್ರಮ ಬಾಂಗ್ಲಾ ವಲಸಿಗರನ್ನು ಕಾರ್ಮಿಕರನ್ನಾಗಿ ಹೊಂದಿದ್ದಲ್ಲಿ ಅಂತಹವರ ವಿರುದ್ಧ ಪಾರಿನ್ ಆಕ್ಟ್ ಪ್ರಕಾರ ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ನೀಡಿದರು.
ಕೊಡಗಿನ ಚೆಕ್ ಪೋಸ್ಟ್‌ಗಳಲ್ಲಿ ಸಿಸಿ ಕ್ಯಾಮರಾ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ನಕ್ಸಲ್ ಚಟುವಟಿಕೆಗಳು ಕಂಡು ಬರುತ್ತಿಲ್ಲವಾದರೂ, ಈ ಜಿಲ್ಲೆಯ ಗಡಿಭಾಗಗಳು ಕೇರಳ ರಾಜ್ಯದೊಂದಿಗೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ದಳ ಸದಾ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಗಡಿ ಭಾಗದ ಚೆಕ್ ಪೋಸ್ಟ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಕಟ್ಟೆಚ್ಚರ ವಹಿಸಲಾಗುವುದು. ಈಗಾಗಲೆ ಕುಟ್ಟ ಚೆಕ್ ಪೋಸ್ಟ್‌ನಲ್ಲಿ ಸಿಸಿ ಕ್ಯಾಮರಾ ಅಳವಡಿಸಿರುವುದಾಗಿ ಎಸ್ಪಿ ರಾಜೇಂದ್ರ ಪ್ರಸಾದ್ ತಿಳಿಸಿದರು.







