ಮುಂಡಗೋಡದಲ್ಲಿ ಪ್ಲಾಸ್ಟಿಕ್ ನಿಷೇಧ ಜಾಥಾ

ಮುಂಡಗೋಡ, ಆ.12: ತಾಲೂಕಾಡಳಿತ, ಪ.ಪಂ., ತಾ.ಪಂ., ಸಮಾಜ ಕಲ್ಯಾಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮುಂಡಗೋಡ, ವರ್ತಕರ ಸಂಘ ಹಾಗೂ ಶಾಲಾ ವಿದ್ಯಾರ್ಥಿಗಳ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಚೀಲ ಬಳಸಿ ಎಂಬ ಘೋಷಣೆಯೊಂದಿಗೆ ಬೃಹತ್ ಪ್ಲಾಸ್ಟಿಕ್ ನಿಷೇದ ಜಾಥಾವು ಗುರುವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಂಚರಿಸಿದ ಜಾಥಾವು ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ನ ಬಳಕೆಯಿಂದ ಪರಿಸರ ಹಾಗೂ ಆರೋಗ್ಯದ ಮೇಲೆ ಆಗುವ ಹಾನಿಯ ಬಗ್ಗೆ ಕರಪತ್ರ ಹಂಚುವ ಮೂಲಕ ತಿಳುವಳಿಕೆ ನೀಡಲಾಯಿತು. ಆ.15ರೊಳಗಾಗಿ ವ್ಯಾಪಾರಸ್ಥರು, ಸಾರ್ವಜನಿಕರು ಪ್ಲಾಸ್ಟಿಕ್‌ಮುಕ್ತ ಪರ್ಯಾಯ ವಸ್ತುಗಳ ಬಳಕೆಗೆ ಹೊಂದಿಕೊಳ್ಳಬೇಕು. ಆ ಬಳಿಕವೂ ಪ್ಲಾಸ್ಟಿಕ್ ಬಳಕೆ ಮುಂದುವರಿಸಿದಲ್ಲಿ ಸಂಬಂಧಿಸಿದ ಇಲಾಖೆಯ ಮೂಲಕ ದಾಳಿ ನಡೆಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಎಚ್ಚರಿಸಲಾಯಿತು. ತಹಶೀಲ್ದಾರ್ ಅಶೋಕ ಗುರಾಣಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಬಿ.ಎಲ್.ಬೈರವಾಡಗಿ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ಸಾಳುಂಕೆ, ಪ.ಪಂ. ಅಧ್ಯಕ್ಷ ಮುಹಮ್ಮದ್ ರಫೀಕ್ ಇನಾಮ್ದಾರ್, ಉಪಾಧ್ಯಕ್ಷ ಫಕೀರಪ್ಪಅಂಟಾಳ, ಸ್ಥಾಯಿ ಸಮಿತಿಯ ಅಧ್ಯಕ್ಷ ರಾಬರ್ಟ ಲೋಬೊ, ಮುಖ್ಯಾಧಿಕಾರಿ ಸಂಗನಬಸಯ್ಯ, ಹಾಗೂ ಪ.ಪಂ. ಸದಸ್ಯರು ಉಪಸ್ಥಿತರಿದ್ದರು.





