‘3,620 ಖಾಲಿ ಹುದ್ದೆ ಭರ್ತಿಗೆ ಕೆಪಿಎಸ್ಸಿಗೆ ಪ್ರಸ್ತಾವನೆ’

ಬೆಂಗಳೂರು, ಆ.17: ಮಹಾನಗರ ಪಾಲಿಕೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿಯಿದ್ದು, ಎಲ್ಲ ಹುದ್ದೆಗಳ ಭರ್ತಿಗೆ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾ ನಗರ ಪಾಲಿಕೆಗಳಲ್ಲಿ 5,757 ಹುದ್ದೆಗಳು, ನಗರ ಸ್ಥಳೀಯ ಸಂಸ್ಥೆಗಳಲ್ಲಿ 11495 ಹುದ್ದೆಗಳು ಖಾಲಿಯಿವೆ. ಆ ಪೈಕಿ ಮಹಾ ನಗರ ಪಾಲಿಕೆ-1199 ಹಾಗೂ ಸ್ಥಳೀಯ ಸಂಸ್ಥೆಗಳ-2421 ಹುದ್ದೆಗಳ ಭರ್ತಿಗೆ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೆ ಒಟ್ಟು 3620 ಹುದ್ದೆಗಳನ್ನು ಭರ್ತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ದೃಷ್ಟಿಯಿಂದ ಹದಿನಾಲ್ಕನೆ ಹಣಕಾಸು ಆಯೋಗದಿಂದ ಬಿಡುಗಡೆ ಮಾಡಿರುವ 388 ಕೋಟಿ ರೂ.ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಹದಿಮೂರನೆ ಹಣಕಾಸು ಆಯೋಗದಲ್ಲಿ ಬಿಡುಗಡೆಯಾದ ಹಣದ ಪೈಕಿ ಶೇ.66ರಷ್ಟು ಬಳಕೆ ಾಡಿದ್ದು, ಉಳಿದ ಮೊತ್ತ ಸೇರಿದಂತೆ ಪ್ರಸಕ್ತ ಸಾಲಿನ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳ ಲಾಗುವುದು ಎಂದ ಸಚಿವರು, ಮಹಾನಗರಪಾಲಿಕೆಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.
ಕ್ರಿಯಾ ಯೋಜನೆ ಶೀಘ್ರ: ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಅಭಿವೃದ್ಧಿ ಸಂಬಂಧ ಸ್ಥಳೀಯ ಸಂಸ್ಥೆಗಳು 3ತಿಂಗಳ ಒಳಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು. ಪ್ರಸ್ತಾವನೆ ಸಲ್ಲಿಸದಿದ್ದರೂ ಆದ್ಯತೆ ಮೇಲೆ ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗಳೆ ಅನುಮೋದನೆ ನೀಡಬಹುದು ಎಂದು ವಿವರಿಸಿದರು.
ಎಲ್ಲರಿಗೂ ಸೂರು: ಎಲ್ಲರಿಗಾಗಿ ವಸತಿ ಯೋಜನೆಯಡಿ ಸ್ಥಳೀಯ ಸಂಸ್ಥೆಗಳಲ್ಲಿನ ಬಡ-ಮಧ್ಯಮ ವರ್ಗದ ಜನರಿಗೆ 1.25 ಲಕ್ಷ ಮನೆ ನಿರ್ಮಿಸುವ ಗುರಿ ಹೊಂದಿದ್ದು, ಆ ಪೈಕಿ 80 ಸಾವಿರ ಮಂದಿ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಉಳಿದ 40 ಸಾವಿರ ಮಂದಿಯ ಪಟ್ಟಿ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದ ಸಚಿವರು, ಈಗಾಗಲೇ 25 ಸಾವಿರ ಮಂದಿಗೆ ಮನೆ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ಅಧಿಕಾರಿಗಳಿಗೆ ಸಿಎಂ ತಾಕೀತು
ಮಹಾನಗರಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ಯೋಜನೆಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಇಂದು ನಡೆದ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಸಚಿವರಾದ ಆರ್.ರೋಷನ್ ಬೇಗ್, ಈಶ್ವರ ಖಂಡ್ರೆ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.







