ಎನ್‌ಡಿಎ ಸರಕಾರ ಆಡಳಿತದಲ್ಲಿ ವಿಫಲ: ಜೈರಾಂ ರಮೇಶ್
ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭ

ತರೀಕೆರೆ, ಆ.22: ಚುನಾವಣೆಗೂ ಮುನ್ನ ರಾಷ್ಟ್ರದ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕಿಂಚಿತ್ತೂ ಕಾಳಜಿ ತೋರುತ್ತಿಲ್ಲ ಎಂದು ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯ ಸಭಾ ಸದಸ್ಯ ಜೈರಾಂ ರಮೇಶ್ ಆರೋಪಿಸಿದರು.
ಅವರು ಪಟ್ಟಣದ ಎಂ.ಜಿ.ಹಾಲ್‌ನಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಲಾಗಿದ್ದ ತರೀಕೆರೆ ಮತ್ತು ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭ ಮತ್ತು ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ವಿದೇಶದಲ್ಲಿರುವ ಕಪ್ಪುಹಣವನ್ನು ದೇಶಕ್ಕೆ ವಾಪಸ್ ತಂದು ಜನಸಾಮಾನ್ಯರ ಖಾತೆಗೆ ಜಮಾ ಮಾಡುತ್ತೇವೆ ಎಂದು ಹೇಳಿದ ಭರಪೂರ ಆಶ್ವಾಸನೆಗಳನ್ನು ಪ್ರಧಾನಿ ಮರೆತಿದ್ದಾರೆ. ಆಡಳಿತಾರೂಡ ಬಿಜೆಪಿ ಸರಕಾರದ ಲೋಪದೋಷಗಳನ್ನು ಜನತೆಗೆ ತಿಳಿಸುವಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶ್ರಮ ವಹಿಸಬೇಕು. ಆ ನಿಟ್ಟಿನಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಿದ್ಧರಾಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಚಿತ್ರದುರ್ಗ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, ಅನುದಾನ ನೀಡದೆ ಕ್ಷೇತ್ರದ ಅಭಿವೃದ್ಧಿ ಮಾಡಿ ಎಂದು ಹೇಳುತ್ತಿರುವ ಕೇಂದ್ರ ಸರಕಾರ ಕೇವಲ ಕನಸು ಕಾಣುವ ಸರಕಾರವಾಗಿದೆ. ಪಕ್ಷದ ರಾಷ್ಟ್ರೀಯ ನಾಯಕರು ಕ್ರಿಯಾಶೀಲವಾಗಿ ವಿರೋಧ ಪಕ್ಷದ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಕಾರ್ಯಕರ್ತರು ಹುಮ್ಮಸ್ಸಿನಿಂದ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಮೋಟಮ್ಮ, ಮಾಜಿ ಸದಸ್ಯೆ ಗಾಯತ್ರಿ ಶಾಂತೆಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ, ಪುರಸಭೆ ಅಧ್ಯಕ್ಷ ಈರಣ್ಣ, ಮುಖಂಡರಾದ ದೋರನಾಳು ಪರಮೇಶ್, ಧರ್ಮರಾಜು, ಗುಳ್ಳದಮನೆ ರಾಮಚಂದ್ರಪ್ಪ, ಗುರುಮೂರ್ತಿ, ಉಮರ್ ಫಾರೂಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.







