ಸರಕಾರದ ವತಿಯಿಂದ ನಾರಾಯಣ ಗುರು ಜಯಂತಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ಆ.23: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಪ್ರತಿ ವರ್ಷ ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಸೆ. 16ರಂದು ನಾರಾಯಣ ಗುರುಗಳ 162ನೇ ಜಯಂತಿಯನ್ನು ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಯವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಬಿಲ್ಲವ ಅಸೋಸಿಯೇಷನ್ ಪದಾಧಿ ಕಾರಿಗಳು ಅಧ್ಯಕ್ಷ ಎಂ. ವೇದಕುಮಾರ್ ಅವರ ನೇತೃತ್ವದಲ್ಲಿ ಮಂಗಳವಾರ ಮುಖ್ಯಮಂತ್ರಿಯವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ನಾರಾಯಣ ಗುರುಗಳ ಜಯಂತಿಯನ್ನು ಸರಕಾರದ ವತಿಯಿಂದಲೇ ಪ್ರತಿವರ್ಷ ಆಚರಿಸುವಂತೆ ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಯವರು, ಜಯಂತಿ ಆಚರಣೆ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಕ್ಷಣ ಸೂಚನೆ ನೀಡಿದರು. ಇದಕ್ಕೆ ಪ್ರತಿಯಾಗಿ ಪದಾಧಿಕಾರಿಗಳು ಮುಖ್ಯಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋ ಗದಲ್ಲಿ ಅಸೋಸಿಯೇಷನ್‌ನ ಹಿರಿಯ ಉಪಾಧ್ಯಕ್ಷ ರಮೇಶ್ ಬಂಗೇರ, ಕಾರ್ಯಕಾರಿ ಸಮಿತಿ ಸದಸ್ಯರಾದ ನಾರಾಯಣ ಪೂಜಾರಿ ಮತ್ತು ಎಚ್.ಬಿ. ಕೃಷ್ಣ ಅವರಿದ್ದರು.





