ವಿವಿಧೆಡೆ ದಾಳಿ: ಅಕ್ರಮ ತಂಬಾಕು ಉತ್ಪನ್ನ ವಶ

ದಾವಣಗೆರೆ, ಆ.24: ಜಿಲ್ಲೆಯ ನಗರ ಪ್ರದೇಶಗಳನ್ನು ಧೂಮಪಾನ ಮುಕ್ತ ನಗರಗಳೆಂದು ಘೋಷಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ದಾಳಿ ನಡೆಸಿದ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ತಂಡ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನ ವಶಪಡಿಸಿಕೊಂಡು ಒಟ್ಟು 42 ಪ್ರಕರಣಗಳನ್ನು ದಾಖಲಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ನೋಡಲ್ ಅಧಿಕಾರಿ ಇಬ್ರಾಹೀಂ ಮೈಗೂರು ತಿಳಿಸಿದರು.
ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಲ್ಲಿ 6 ಪ್ರಕರಣ, ಮತ್ತು 6ಎ ಅಡಿಯಲ್ಲಿ 5 ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣಗಳನ್ನು ದಾಖಲಿಸಿ, ರೂ. 2,100 ಗಳನ್ನು ದಂಡದ ರೂಪದಲ್ಲಿ ಸ್ಥಳದಲ್ಲಿಯೇ ಸಂಗ್ರಹಿಸಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು ಎಂದು ತಿಳಿಸಿದರು.
ಎರಡು ತಂಡಗಳನ್ನಾಗಿ ರಚಿಸಿ, ಒಂದು ತಂಡ ಬಿಐಇಟಿ ರಸ್ತೆಯ ಸಿದ್ದವೀರಪ್ಪ ಬಡಾವಣೆಯಿಂದ ಆಂಜನೇಯ ಬಡಾವಣೆವರೆಗೆ ಹಾಗೂ ಮತ್ತೊಂದು ತಂಡ ಜೆಜೆಎಂ ಮೆಡಿಕಲ್ ಕಾಲೇಜ್ ಬಾಯ್ಸೊ ಹಾಸ್ಟೆಲ್ ರಸ್ತೆಯ ಮೆಡಿಕಲ್ ಹಾಸ್ಟೆಲ್ ಸುತ್ತಮುತ್ತಲಿನ ಹೊಟೇಲ್, ಬಾರ್ ಮತ್ತು ರೆಸ್ಟೋರೆಂಟ್, ಪಾನ್‌ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು.
ಅಂಗಡಿ ಮಾಲಕರು ಧೂಮಪಾನ ನಿಷೇಧಿಸಿದೆ ಎಂಬ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ತಾಕೀತು ಮಾಡಿದರು. ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವ ಬಗ್ಗೆ ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡದಿರುವುದು ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‌ಗಳ ಮೇಲೆ ಎಚ್ಚರಿಕೆ ಚಿಹ್ನೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧ ಇರುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ವಿವಿಧ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.







