‘ಪ್ರತೀ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ: ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್
ಓರಿಯೆಂಟೇಶನ್ ಕಾರ್ಯ ಕ್ರಮ

ಕಾರವಾರ, ಸೆ.3: ಕಾರವಾರದಲ್ಲಿ ಪ್ರಸ್ತುತ ವರ್ಷದಿಂದ ಆರಂಭವಾಗಿರುವ ವೈದ್ಯಕೀಯ ಕಾಲೇಜಿಗೆ ಅಗತ್ಯವಾದ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ಅವರು, ಶನಿವಾರ ಕಾರವಾರ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಥಮ ವರ್ಷದ ವೈದ್ಯಕೀಯ ಕಾಲೇಜಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಪ್ರಸ್ತುತ 80 ಮಂದಿ ವೈದ್ಯಕೀಯ ಸಿಬ್ಬಂದಿ ಇದ್ದಾರೆ. ಬಹುತೇಕ ಹುದ್ದೆಗಳನ್ನು ತುಂಬ ಲಾಗಿದ್ದು, ಇನ್ನೂ ಶೇ.15ರಷ್ಟು ಹುದ್ದೆಗಳು ಖಾಲಿಯಿವೆ. ಅವು ಗಳನ್ನು ತುಂಬಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಎರಡು ತಿಂಗಳಲ್ಲಿ ಎಂಸಿಐ ತಂಡ ಪರಿಶೀಲನೆಗೆ ಆಗಮಿಸಲಿದ್ದು, ಅದರೊಳಗಾಗಿ ಎಲ್ಲ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಆಸ್ಪತ್ರೆ ಮೇಲ್ದರ್ಜೆಗೆ: ಪ್ರಸ್ತುತ 400ಹಾಸಿಗೆ ಸಾಮರ್ಥ್ಯದ ಜಿಲ್ಲಾಸ್ಪತ್ರೆಯನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಲಾಗಿದೆ. ಪೂರ್ಣಪ್ರಮಾಣದಲ್ಲಿ ವೈದ್ಯಕೀಯ ಕಾಲೇಜು ಕಾರ್ಯ ನಿರ್ವಹಿಸಲು 650ಹಾಸಿಗೆ ಸಾಮರ್ಥ್ಯದ ಕಟ್ಟಡದ ಅಗತ್ಯವಿದೆ. ಇದಕ್ಕಾಗಿ ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ರಾಜ್ಯ ಸರಕಾರ ಈಗಾಗಲೇ 6 ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಿದ್ದು, ಇನ್ನೂ 6ಮೆಡಿಕಲ್ ಕಾಲೇಜುಗಳಿಗೆ ಅನುಮೋದನೆ ನೀಡಲಾಗಿದೆ. ಇನ್ನುಳಿದಂತೆ ಹೊಸದಾಗಿ 7ಮೆಡಿಕಲ್ ಕಾಲೇಜುಗಳನ್ನು ವಿವಿಧ ಜಿಲ್ಲೆಗಳಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಹಣಕಾಸು ಇಲಾಖೆ ಅನುಮೋದನೆಗಾಗಿ ಕಳುಹಿಸಲಾಗಿದೆ. ಪ್ರತೀ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವುದು ಸರಕಾರದ ಗುರಿಯಾಗಿದೆ ಎಂದರು.
ದೇಶದಲ್ಲೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ಕಾಲೇಜುಗಳು ರಾಜ್ಯದಲ್ಲಿದ್ದರೂ, ಬಹುತೇಕ ಪ್ರಾಥಮಿಕ ಆರೋಗ್ಯ ಕೆಡೀಂದ್ರಗಳಲ್ಲಿ ವೈದ್ಯಾಧಿಕಾರಿಗಳಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿ ಸರಕಾರ ಕಾನೂನು ರೂಪಿಸಿದೆ. ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸರಕಾರ ಅಪಾರ ಹಣವನ್ನು ವೆಚ್ಚ ಮಾಡುತ್ತಿದ್ದು, ವಿದ್ಯಾರ್ಥಿಗಳು ಅದನ್ನು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವ ಮೂಲಕ ಋಣ ಸಂದಾಯ ಮಾಡಬೇಕು ಎಂದು ಅವರು ಹೇಳಿದರು.
ಹೊಸದಾಗಿ ವೈದ್ಯ ವಿಜ್ಞಾನ ಪದವಿ ತರಗತಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳನ್ನು ಸಚಿವರು ಈ ಸಂದರ್ಭದಲ್ಲಿ ಗುಲಾಬಿ ಹೂ ನೀಡಿ ಸ್ವಾಗತಿಸಿದರು.
ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಶಾಸಕರಾದ ಸತೀಶ್ ಸೈಲ್, ಮಂಕಾಳು ವೈದ್ಯ, ಡಿಸಿ ಎಸ್.ಎಸ್.ನಕುಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಧಿಕಾರಿ ಡಾ.ಅಶೋಕ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವೈದ್ಯಕೀಯ ವೃತ್ತಿ ಪವಿತ್ರವಾಗಿದೆ. ಆದರೆ ಎಲ್ಲ ಕ್ಷೇತ್ರದಂತೆ ವೈದ್ಯಕೀಯ ಕ್ಷೇತ್ರದಲ್ಲೂ ಸೇವಾ ಮನೋಭಾವನೆ ಕಡಿಮೆಯಾಗುತ್ತಿದೆ. ಆದಷ್ಟು ಬೇಗನೆ ಹಣ ಸಂಪಾದಿಸಬೇಕೆಂಬ ಅತಿಯಾಸೆಗೆ ಒಳಗಾಗದೆ ಬಡವರಿಗೆ ನೆರವಾಗುವಂತಹ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು.
<
ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ







