ಬಿ.ಸಿ.ರೋಡ್: ಸರ್ವಿಸ್ ರಸ್ತೆಯಲ್ಲಿ ಪೊಲೀಸರ ಕಾರ್ಯಾಚರಣೆ
ಬಂಟ್ವಾಳ, ಸೆ.3: ಅಗಲೀಕರಣಗೊಂಡ ಬಿ.ಸಿ.ರೋಡ್ ಸರ್ವಿಸ್ ರಸ್ತೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡಿದ್ದ ವಾಹನಗಳ ಚಕ್ರಗಳಿಗೆ ಲಾಕ್ ಹಾಕಿ ದಂಡ ವಿಧಿಸುವ ಕಾರ್ಯಾಚರಣೆಗಿಳಿದ ಬಂಟ್ವಾಳ ಟ್ರಾಫಿಕ್ ಪೊಲೀಸರು, ಸರಕು ಸರಂಜಾಮುಗಳನ್ನು ರಸ್ತೆಯಲ್ಲಿಟ್ಟು ವ್ಯಾಪಾರ ಮಾಡುತ್ತಿದ್ದ ಅಂಗಡಿ ಮಾಲಕರಿಗೂ ಕಾನೂನು ಕ್ರಮದ ಎಚ್ಚರಿಕೆ ನೀಡಿದರು. ಬಿ.ಸಿ.ರೋಡ್ ಸರ್ವಿಸ್ ರಸ್ತೆಯಲ್ಲಿ ದಿನನಿತ್ಯ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಇನ್ನಿಲ್ಲದ ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿನ ನಿತ್ಯ ಸಮಸ್ಯೆಯನ್ನು ಮನಗಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಾಸೆ ಇತ್ತೀಚೆಗೆ ಭೇಟಿ ನೀಡಿ ಸರ್ವಿಸ್ ರಸ್ತೆಯನ್ನು ಪರಿಶೀಲನೆ ನಡೆಸಿದ್ದರು. ವಾಹನಗಳ ಸುಗಮ ಸಂಚಾರಕ್ಕಾಗಿ ಬಂಟ್ವಾಳ ಟ್ರಾಫಿಕ್ ಪೊಲೀಸರಿಗೆ ಮಾರ್ಗದರ್ಶನ ನೀಡಿದ್ದರು.
ಅದರಂತೆ ಬಂಟ್ವಾಳ ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ ಕಾರ್ಯಾಚರಣೆ ನಡೆಸಿ ಸಂಚಾರ ನಿಮಯ ಉಲ್ಲಂಘಿಸುವವರ ವಿರುದ್ಧ ಕ್ರಮ ಜರಗಿಸಿದ್ದಾರೆ. ಕಾರ್ಯಾಚರಣೆಯಲ್ಲಿ ನಗರ ಠಾಣೆ ಎಸ್ಸೈ ನಂದಕುಮಾರ್, ಸಂಚಾರ ಠಾಣಾ ಎಸ್ಸೈಗಳಾದ ಚಂದ್ರಶೇಖರಯ್ಯ, ರತನ್ ಕುಮಾರ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.





