ಕಾವೇರಿ ನದಿ ನೀರು ಹಂಚಿಕೆ ವಿವಾದ: ನಾರಿಮನ್-ಸಿಎಂ ಚರ್ಚೆ

ಬೆಂಗಳೂರು/ಹೊಸದಿಲ್ಲಿ, ಸೆ.3: ಕಾವೇರಿ ನದಿ ನೀರು ಬಿಡುಗಡೆ ಕುರಿತು ಸುಪ್ರೀಂಕೋರ್ಟ್ ವ್ಯಕ್ತಪಡಿಸಿರುವ ‘ಬದುಕಿ-ಬದುಕಲು ಬಿಡಿ’ ಎಂಬ ಅಭಿಪ್ರಾಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಪರ ವಕೀಲರ ತಂಡದ ಮುಖ್ಯಸ್ಥ ಫಾಲಿ ಎಸ್. ನಾರಿಮನ್‌ರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಶನಿವಾರ ಹೊಸದಿಲ್ಲಿಯ ನಾರಿಮನ್ ಅವರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾತುಕತೆ ನಡೆಸಿದರು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಭಾವದಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿದಿದೆ. ಆದುದರಿಂದ, ತಮಿಳುನಾಡಿಗೆ ನೀರು ಹರಿಸುವ ಪರಿಸ್ಥಿತಿಯಲ್ಲಿ ನಾವಿಲ್ಲವೆಂದು ನಾರಿಮನ್‌ಗೆ ಮುಖ್ಯಮಂತ್ರಿ ಸ್ಪಷ್ಟವಾಗಿ ಹೇಳಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರು ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಜಿಲ್ಲೆಗಳಿಗೆ ಕುಡಿಯುವ ಉದ್ದೇಶಕ್ಕೆ ಮಾತ್ರ ಪೂರೈಕೆ ಮಾಡಲು ಸಾಧ್ಯವಾಗುತ್ತದೆ. ರೈತರು ಬೆಳೆದಿರುವ ಬೆಳೆಗಳಿಗೆ ನೀರು ಒದಗಿಸುವುದು ಸಾಧ್ಯವಿಲ್ಲದಂತಹ ಪರಿಸ್ಥಿತಿಯಿದೆ ಎಂದು ನಾರಿಮನ್‌ಗೆ ಸಿದ್ದರಾಮಯ್ಯ ಮನವರಿಕೆ ಮಾಡಿಕೊಟ್ಟಿದ್ದಾರೆ.
ಆದರೆ, ತಮಿಳುನಾಡು ಸರಕಾರ ಸಾಂಬಾ ಬೆಳೆಗೆ 50 ಟಿಎಂಸಿ ನೀರು ಬಿಡುಗಡೆ ಮಾಡಲು ಸೂಚನೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯು ಸೋಮವಾರವೂ ವಿಚಾರಣೆಗೆ ಬರಲಿದೆ. ಈ ಸಂದರ್ಭದಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ನ್ಯಾಯಾಲಯಕ್ಕೆ ಮನದಟ್ಟು ಮಾಡಿಕೊಡುವಂತೆ ಮುಖ್ಯಮಂತ್ರಿಗಳು ನಾರಿಮನ್ ಅವರಿಗೆ ಮನವಿ ಮಾಡಿದ್ದಾರೆ.
ನಾರಿಮನ್ ಜೊತೆಗಿನ ಮಾತುಕತೆಯ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ.ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.







