ಕಾವೇರಿ ನೀರು ಹಂಚಿಕೆ ಸುಪ್ರೀಂ ಆದೇಶ : ನಾಳೆ ಬೆಳಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲು ಸರಕಾರ ನಿರ್ಧಾರ

ಬೆಂಗಳೂರು, ಸೆ.5: ತಮಿಳುನಾಡಿಗೆ ಕಾವೇರಿ ನದಿಯ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ಸಂಬಂಧಿಸಿ ಮಂಗಳವಾರ ಬೆಳಗ್ಗೆ ರಾಜ್ಯ ಸರಕಾರ ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.
ನ್ಯಾಯಾಲಯದ ತೀರ್ಪು ಹೊರ ಬಿದ್ದ ಬೆನ್ನಲ್ಲೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟದ ತುರ್ತು ಸಭೆ ನಡೆದು ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಸಂಬಂಧಿಸಿ ನಾಳೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದುವರಿಯುವ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರಕಾರ ನೇಮಿಸಿರುವ ವಕೀಲರ ತಂಡಕ್ಕೆ ಆಗಮಿಸುವಂತೆ ಸೂಚನೆ ನೀಡಲಾಗಿದೆ. ನಾಳೆ ಮಧ್ಯಾಹ್ನ ವಿಧಾನ ಮಂಡಲದ ಉಭಯ ನಾಯಕರೊಂದಿಗೆ ಸಮಾಲೋಚನಾ ಸಭೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
" ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನ ಆದೇಶದ ಪ್ರತಿ ಇನ್ನೂ ಸರಕಾರದ ಕೈ ಸೇರಿಲ್ಲ.ನಮ್ಮ ಲೀಗಲ್ ಟೀಮ್‌ಗೆ ನಾಳೆ ಬೆಂಗಳೂರಿಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ. ಜನ ಭಾವನಾತ್ಮಕವಾಗಿದ್ದಾರೆ. ಕರ್ನಾಟಕದಲ್ಲಿ ನೀರಿಗೆ ತೊಂದರೆ ಇದೆ. ಪ್ರತಿ ಬಾರಿಯೂ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ” ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಆದರೆ ಕಾನೂನನ್ನು ಕೈಗೆತ್ತಿಕೊಳ್ಳದಂತೆ ಜನತೆಗೆ ಮನವಿ ಮಾಡಿದ್ದಾರೆ.





