ಭ್ರಷ್ಟ ಅಧಿಕಾರಿಗಳು ಎಸಿಬಿ ಬಲೆಗೆ

ಬೆಂಗಳೂರು, ಸೆ.7: ಅಕ್ರಮ ಆಸ್ತಿ ಹೊಂದಿದ ಮೂವರು ಸರಕಾರಿ ಅಧಿಕಾರಿಗಳ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಸಿಬಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಗಗನ್ ದೀಪ್ ತಿಳಿಸಿದ್ದಾರೆ.
ಬುಧವಾರ ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಇಲ್ಲಿನ ಆರ್‌ಟಿ ನಗರದ ಸಂಪತ್ ಕೃಷ್ಣ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ಕೋಲಾರದ ಶ್ರೀನಿವಾಸ ರೆಡ್ಡಿ, ಚಿಕ್ಕಬಳ್ಳಾಪುರ ತಾಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಜಿ.ಟಿ ಶ್ರೀನಿವಾಸ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆ ಎಂದು ಮಾಹಿತಿ ನೀಡಿದರು. ಕೋಲಾರ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರು ಚಿಂತಾಮಣಿ ತಾಲೂಕಿನಲ್ಲಿ ಅಕ್ರಮ ಆಸ್ತಿ ಹೊಂದಿದ್ದರು. ಪ್ರೀತಿ ಪಬ್ಲಿಕ್ ಶಾಲಾ ಆವರಣದ ಸಮೀಪ ಇರುವ ಇವರ ಕಚೇರಿಯ ಮೇಲೆ ದಾಳಿ ನಡೆಸಿ ಅನೇಕ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೊಬ್ಬ ಆರೋಪಿ ಚಿಕ್ಕಬಳ್ಳಾಪುರ ತಾಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಜಿ.ಟಿ ಶ್ರೀನಿವಾಸ್ ಅವರು ಗುಡಿಬಂಡೆಯ ಬಾಪೂಜಿನಗರದಲ್ಲಿ ಅಕ್ರಮ ಆಸ್ತಿ ಹೊಂದಿದ್ದರು. ಅವರ ಆಸ್ತಿಯ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಅದೇ ರೀತಿ, ಮತ್ತೊಬ್ಬ ಆರೋಪಿ ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸಂಪತ್ ಕೃಷ್ಣ ಅವರು ಆರ್.ಟಿ ನಗರದ ಕನಕಪುರದಲ್ಲಿ ಅಕ್ರಮ ಆಸ್ತಿ ಹೊಂದಿದ್ದರು. ವಿಶ್ವೇಶ್ವರಯ್ಯ ಗೋಪುರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಚೇರಿಯಲ್ಲಿ ಇವರು ಹೊಂದಿರುವ ಅಕ್ರಮ ಆಸ್ತಿಗಳ ವಿವರಗಳ ಬಗ್ಗೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ 1998 ಕಲಂ, 13(1)ಇ ರಂತೆ ದೂರು ದಾಖಲು ಮಾಡಿ ತನಿಖೆ ಮುಂದುವರೆಸಲಾಗಿದೆ ಎಂದರು.







