ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ರಾಜಕೀಯ ಮುತ್ಸದ್ದಿ ಬಿ.ಎ.ಮೊಹಿದಿನ್‌ರಿಗೆ ಸೆ.15ರಂದು ಪೌರಸನ್ಮಾನ

ಮಂಗಳೂರು, ಸೆ.7: ಕರ್ನಾಟಕ ಸರಕಾರದ ಪ್ರತಿಷ್ಠಿತ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಜಿಲ್ಲೆಯ ರಾಜಕೀಯ ಮುತ್ಸದ್ದಿ ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ. ಮೊಹಿದಿನ್ ಅವರಿಗೆ ಪೌರಸನ್ಮಾನ ಸಮಾರಂಭವು ಸೆ.15ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ಸೆ.15ರಂದು ಅಪರಾಹ್ನ 3:30ಕ್ಕೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಎಂ. ಹರಿನಾಥ ವಹಿಸಲಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್ ಕುಮಾರ್ ಅಭಿನಂದನಾ ಭಾಷಣ ಮಾಡಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಖಾಝಿಗಳಾದ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್, ಅಲ್‌ಹಾಜ್ ಅಸೈಯದ್ ಫಝಲ್ ಕೋಯಮ್ಮ ತಂಙಳ್, ಆದಿಚುಂಚನಗಿರಿ ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ, ಮಂಗಳೂರು ಪ್ರಾಂತದ ಧರ್ಮಗುರು ರೆ.ಫಾ. ಡೆನಿಸ್ ಮೊರಾಸ್ ಪ್ರಭು ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗೃಹಸಚಿವ ಡಾ.ಜಿ. ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ, ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್, ಬಂದರು, ಮೀನುಗಾರಿಕೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ಸಂಸದ ವೀರಪ್ಪ ಮೊಯ್ಲಿ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಸಂಸದ ನಳಿನ್ ಕುಮಾರ್ ಕಟೀಲು, ವಿಧಾನಪರಿಷತ್‌ನ ವಿಪಕ್ಷ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಸುನಿಲ್ ಕುಮಾರ್, ಶಾಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೌರಸನ್ಮಾನ ಸ್ವಾಗತ ಸಮಿತಿಯನ್ನು ರಚಿಸಲಾಗಿದ್ದು, ವಿಧಾನಪರಿಷತ್‌ನ ಮುಖ್ಯಸಚೇತಕ ಐವನ್ ಡಿಸೋಜ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಸಂಚಾಲಕರಾಗಿದ್ದಾರೆ. ಕೆ.ಎಂ. ಮುಸ್ತಫಾ ಸುಳ್ಯ ಪ್ರಧಾನ ಕಾರ್ಯದರ್ಶಿ ಮತ್ತು ಲಾರೆನ್ಸ್ ಡಿಸೋಜ ಕಾರ್ಯಕ್ರಮ ಸಂಚಾಲಕರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.







