ಸಹಜ ಸ್ಥಿತಿಗೆ ತರುವುದು ಕೇಂದ್ರದ ಹೊಣೆ: ಖರ್ಗೆ
ಜಮ್ಮು-ಕಾಶ್ಮೀರ ಹಿಂಸಾತ್ಮಕ ಹೋರಾಟ
ಬೆಂಗಳೂರು, ಸೆ.8: ಕಳೆದ ಎರಡು ತಿಂಗಳಿನಿಂದ ಜಮ್ಮು- ಕಾಶ್ಮೀರದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯನ್ನು ಸಹಜ ಸ್ಥಿತಿಗೆ ತರುವುದು ಕೇಂದ್ರ ಸರಕಾರದ ಜವಾಬ್ದಾರಿ ಎಂದು ಕೇಂದ್ರದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಹಾಗೂ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸುತ್ತಿರುವ ಹಿಂಸಾತ್ಮಕ ದಾಳಿ ಹೆಚ್ಚಾಗಿ ಮತ್ತಷ್ಟು ಉದ್ವಿಗ್ನಗೊಳ್ಳುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸೂಕ್ತ ಮಾರ್ಗೋಪಾಯಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.
ಕಳೆದ ಎರಡು ತಿಂಗಳಿಂದ ಜಮ್ಮು-ಕಾಶ್ಮೀರದ ಜನತೆ ತೀರ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಅಲ್ಲಿನ ಶಾಲಾ- ಕಾಲೇಜುಗಳು, ಅಂಗಡಿ, ಮುಂಗಟ್ಟುಗಳು, ಕೈಗಾರಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಇದನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಜಮ್ಮು- ಕಾಶ್ಮೀರದ ಸ್ಥಳಿಯ ಪಕ್ಷಗಳ ಜೊತೆ ಮಾತುಕತೆ ನಡೆಸಬೇಕಾಗಿದೆ ಎಂದು ಹೇಳಿದರು.
ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಹಾಗೂ ಪಿಡಿಪಿ ಸರಕಾರವಿದೆ. ಹಾಗೂ ಕೇಂದ್ರದಲ್ಲಿ ಬಿಜೆಪಿ ಸರಕಾರವಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ರಾಜಕೀಯ ಪಕ್ಷಗಳು, ಸ್ಥಳೀಯ ಸಂಘಟನೆಗಳ ಜೊತೆ ಮಾತುಕತೆ ನಡೆಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.





