ತಮ್ಮ ವೆಫಲ್ಯ ಮುಚ್ಚಿಕೊಳ್ಳಲು ಪ್ರಧಾನಿಯತ್ತ ಬೊಟ್ಟು

ಸಿಎಂ ಸಿದ್ದರಾಮಯ್ಯ ವಿರುದ್ಧ ಶೆಟ್ಟರ್ ಆರೋಪ
ಹುಬ್ಬಳ್ಳಿ, ಸೆ.11: ರಾಜ್ಯದಲ್ಲಿ ಆಡಳಿತ ನಡೆಸಲು ಸಂಪೂರ್ಣ ವಿಫಲವಾಗಿರುವ ಸಿದ್ದರಾಮಯ್ಯ, ಎಲ್ಲದಕ್ಕೂ ಪ್ರಧಾನಿ ನರೇಂದ್ರ ಮೋದಿಯವರತ್ತ ಬೊಟ್ಟು ಮಾಡುವ ಮೂಲಕ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ರವಿವಾರ ನಗರದಲ್ಲಿ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ-218ರ ಕೇಶ್ವಾಪುರ ವೃತ್ತದಿಂದ ಕುಸುಗಲ್ ಮಾರ್ಗದ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೇಳುವುದು ಒಂದು ಮಾಡುವುದು ಮತ್ತೊಂದು ಎಂದು ಲೇವಡಿ ಮಾಡಿದರು.
ಯಾವ ಸಂದರ್ಭದಲ್ಲಿ ಏನು ಮಾಡಬೇಕೆಂಬ ಕನಿಷ್ಠ ಜ್ಞಾನವೂ ಸಿದ್ದರಾಮಯ್ಯರಿಗೆ ಇಲ್ಲ. ಹೀಗಾಗಿ ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧದ ಸಂಕಷ್ಟ ಸೃಷ್ಟಿಯಾಗಿರುವ ವೇಳೆ ಮಹಾದಾಯಿ ನದಿ ನೀರಿನ ಹಂಚಿಕೆ ಸಂಬಂಧ ಗೋವಾ ಸಿಎಂ ಜತೆ ಮಾತುಕತೆ ನಡೆಸಲು ದೂರವಾಣಿ ಕರೆ ಮಾಡಿದ್ದೇನೆ. ಆದರೆ, ಅವರು ಸಿಗುತ್ತಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.
ಗಂಭೀರ ವಿಷಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಗುರವಾಗಿ ಪರಿಗಣಿಸುತ್ತಿರುವುದರಿಂದ ರಾಜ್ಯದ ರೈತರು-ಜನತೆ ಸಮಸ್ಯೆ, ಸಂಕಷ್ಟಕ್ಕೆ ಸಿಲುಕಬೇಕಾದ ದುಸ್ಥಿತಿ ಬಂದಿದೆ ಎಂದು ವಿಶ್ಲೇಷಿಸಿದ ಅವರು, ಮಹಾದಾಯಿ ವಿಚಾರದಲ್ಲಿ ಸರಕಾರ ಕಾಟಾಚಾರದ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಅಭಿವೃದ್ಧಿಗೆ ಪೂರಕ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಉತ್ತರ ಕರ್ನಾಟಕ ಭಾಗದಲ್ಲಿ ವಾಸ್ತವ್ಯ ಹೂಡುತ್ತಿರುವುದು ಸ್ವಾಗತಾರ್ಹ. ಇದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕ ಆಗಲಿದೆ ಎಂದು ಶೆಟ್ಟರ್ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಪ್ರಹ್ಲಾದ್ ಜೋಶಿ, ಮೇಲ್ಮನೆ ಸದಸ್ಯ ಪ್ರದೀಪ್ ಶೆಟ್ಟರ್,ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಪಾಲಿಕೆ ಸದಸ್ಯರಾದ ಸ್ಮಿತಾ ಜಾಧವ್, ಮಲ್ಲಿಕಾರ್ಜುನ ಸಾವುಕಾರ, ಚವ್ಹಾಣ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.







