ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಜೆಪಿ ರೈತ ಮೋರ್ಚದಿಂದ ಧರಣಿ

ಮಂಗಳೂರು, ಸೆ.14:ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರಬ್ಬರ್ ಮತ್ತು ಅಡಿಕೆ ಬೆಳೆಗಾರರಿಗೆ ಸರಕಾರ ತಕ್ಷಣ ಬೆಂಬಲ ಬೆಲೆ ಘೋಷಿಸಬೇಕು ಎಂದು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಏರ್ಪಡಿಸಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಅಡಿಕೆ ಬೆಳೆಗಾರರ ಸಮಸ್ಯೆಯ ಹಿನ್ನೆಲೆಯಲ್ಲಿ ವೈಜ್ಞಾನಿಕ ವರದಿ ತಯಾರಿಸಲು ಸತತ ಒತ್ತಡ ಹೇರಿದ್ದರೂ ಇನ್ನೂ ಕೂಡ ವರದಿ ತಯಾರಿಸಲು ಸಾಧ್ಯವಾಗಿಲ್ಲ. ಕಳೆದ ಒಂದೂವರೆ ವರ್ಷದಲ್ಲಿ ರಬ್ಬರ್ ಬೆಲೆ ತೀವ್ರ ಕುಸಿದಿದ್ದು, ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಆದರೆ ರಾಜ್ಯ ಸರಕಾರ ಈ ಬಗ್ಗೆ ಗಮನವೇ ಹರಿಸುತ್ತಿಲ್ಲ ಎಂದು ನಳಿನ್ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶಾಂತವೀರಪ್ಪ ಗೌಡ, ರೈತ ಮೋರ್ಚಾ ದ.ಕ.ಜಿಲ್ಲಾಧ್ಯಕ್ಷ ರಾಜೀವ ಭಂಡಾರಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕ ಎನ್.ಯೋಗೀಶ್ ಭಟ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಮೋನಪ್ಪ ಭಂಡಾರಿ, ಮಾಜಿ ಶಾಸಕ ರುಕ್ಮಯ ಪೂಜಾರಿ, ಬಿಜೆಪಿ ಮುಖಂಡರಾದ ಸುಲೋಚನಾ ಜಿ.ಕೆ.ಭಟ್, ರಾಜೇಶ್ ನಾಯ್ಕಿ ಉಳಿಪ್ಪಾಡಿಗುತ್ತು, ದೇವದಾಸ ಶೆಟ್ಟಿ, ರಾಮ ಅಮೀನ್ ಪಚ್ಚನಾಡಿ, ಪೂಜಾ ಪೈ, ರಾಜೀವ್ ಪೆರ್ಮಂಕಿ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ ಗಟ್ಟಿ, ಬಾಲಕೃಷ್ಣ ಬಾಣಜಾಲು ಮುಂತಾದವರು ಉಪಸ್ಥಿತರಿದ್ದರು.
ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.







