ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನೀತಿ: ಪ್ರಮೋದ್ ಮಧ್ವರಾಜ್

ಬೆಂಗಳೂರು, ಸೆ.14: ಖಾಸಗಿ ಸಹಭಾಗಿತ್ವದಲ್ಲಿ ಮುಂದಿನ ಎರಡು ತಿಂಗಳೊಳಗೆ ರಾಜ್ಯದಲ್ಲಿ ಹೊಸ ಕ್ರೀಡಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಕ್ರೀಡಾ ಮತ್ತು ಮೀನುಗಾರಿಕ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಬುಧವಾರ ಇಲ್ಲಿನ ಅಕ್ಕಿತಿಮ್ಮನಹಳ್ಳಿಯಲ್ಲಿರುವ ಹಾಕಿ ಕ್ರೀಡಾಂಗಣ ಮತ್ತು ಕಂಠೀರವ ಕ್ರೀಡಾಂಗಣಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲೇ ಮಾದರಿ ಕ್ರೀಡಾನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಭೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿರುವ ಎಲ್ಲ ಕ್ರೀಡಾಪಟುಗಳಿಗೆ ಗುರುತಿನ ಚೀಟಿ ನೀಡಲಾಗಿದ್ದು, ಕಂಠೀರವ ಕ್ರೀಡಾಂಗಣ ಸೇರಿದಂತೆ ರಾಜ್ಯದ ಪ್ರಮುಖ ಕ್ರೀಡಾಂಗಣಗಳಿಗೆ ಕ್ರೀಡಾಪಟುಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು. ಆ ಮೂಲಕ ಕ್ರೀಡಾಂಗಣದ ಸ್ವಚ್ಛತೆ ಹಾಗೂ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ಕೊಡಲಾಗುವುದು ಎಂದು ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.
ಅಕ್ಕಿತಿಮ್ಮನಹಳ್ಳಿಯಲ್ಲಿರುವ ಹಾಕಿ ಕ್ರೀಡಾಂಗಣವನ್ನು ಸುಮಾರು 7.26ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗಿದೆ. ಇದರ ಜೊತೆಗೆ ಕ್ರೀಡಾಂಗಣಕ್ಕೆ ಹೊಂದಿಕೊಂಡಿರುವ ಬಿಬಿಎಂಪಿಗೆ ಸೇರಿದ 3ಎಕರೆ ಜಾಗವನ್ನು ಕ್ರೀಡಾಂಗಣಕ್ಕೆ ಸೇರ್ಪಡೆಗೊಳಿಸಿ, ಅಂತಾರಾಷ್ಟ್ರೀಯ ಮಟ್ಟದ ಹಾಕಿ ಟರ್ಫನ್ನು ಅಳವಡಿಸಲಾಗುವುದು ಎಂದು ಅವರು ತಿಳಿಸಿದರು.
ಕಂಠೀರವ ಕ್ರೀಡಾ ಸಂಕೀರ್ಣದಲ್ಲಿ 2,400 ಚದರ ಅಡಿಯಲ್ಲಿ ಕರ್ನಾಟಕ ಒಲಿಂಪಿಕ್ ಭವನ ನಿರ್ಮಿಸಲು ಸರಕಾರದಿಂದ ಅನುಮೋದನೆ ಸಿಕ್ಕಿದೆ. ಇದರ ಕಾಮಗಾರಿಯನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು. ಹಾಗೂ ಕಂಠೀರವ ಕ್ರೀಡಾಂಗಣದ ಬದಿಯಲ್ಲಿರುವ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕ ರೀತಿಯಲ್ಲಿ ದುರಸ್ತಿ ಮಾಡುವಂತೆ ಬಿಬಿಎಂಪಿ ಸೂಚಿಸಲಾಗಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.
ಕ್ರೀಡಾಪಟುಗಳ ಭದ್ರತೆ ಹೆಚ್ಚಿನ ಆದ್ಯತೆ ಕೊಡಲಾಗಿದೆ. ಆ ನಿಟ್ಟಿನಲ್ಲಿ ಕ್ರೀಡಾಂಗಣಗಳ ಸುತ್ತಮುತ್ತ ಸಿಸಿ ಟಿವಿ ಅಳವಡಿಸಲಾಗುವುದು. ಮುಂದಿನ ಅ.1ರಿಂದ ಕ್ರೀಡಾಂಗಣದ ಒಳ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿರುವ ಎಲ್ಲ ವಿಭಾಗದ ಕ್ರೀಡಾಪಟುಗಳ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಕ್ರೀಡಾಪಟುಗಳಿಗಿರುವ ಸಮಸ್ಯೆಹಾಗೂ ಸವಾಲುಗಳ ಮಾಹಿತಿ ಪಡೆಯಲಾಗುವುದು. ಉತ್ತಮ ಕ್ರೀಡಾಪಟುವಾಗಿ ರೂಪುಗೊಳ್ಳಲು ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.





