ಯೋಗಾಭ್ಯಾಸದ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ: ಶಾಸಕ ಎಂ.ಪಿ.ಅಪ್ಪಚ್ಚುರಂಜನ್
ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ
ಕುಶಾಲನಗರ, ಸೆ 20: ಪ್ರತಿಯೊಬ್ಬರೂ ಉತ್ತಮ ಆಹಾರ ಪದ್ಧ್ದತಿ ಮತ್ತು ಯೋಗಾಭ್ಯಾಸದ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಕರೆ ನೀಡಿದರು.
ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೆೇರಿ, ಕುಶಾಲನಗರ ಪಟ್ಟಣ ಪಂಚಾಯತ್ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಸ್ಥಳೀಯ ಎಪಿಸಿಎಂಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜನಸಂಖ್ಯಾ ಸ್ಫೋಟದಿಂದ ಆಹಾರ, ನೀರು ಮೊದಲಾದ ಸಂಪನ್ಮೂಲ ಕೊರತೆ ಎದುರಾಗುವುದರೊಂದಿಗೆ ಬಡತನ ಮತ್ತು ಸ್ವಚ್ಛತೆಯ ಸಮಸ್ಯೆ ಉಲ್ಬಣಿಸುತ್ತಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೈಗೊಂಡಿರುವ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಸಾಹಿತಿ ಕೆ.ಆನಂದತೀರ್ಥ ಭಾರದ್ವಾಜ್ ಮಾತನಾಡಿ, ಜನಸಂಖ್ಯೆ ಹೆಚ್ಚಳವನ್ನು ನಿಯಂತ್ರಣ ಮಾಡುವ ಮಾರ್ಗಗಳು ಸುಲಭ, ಅದರ ಅರಿವು ನಮಗಿರಬೇಕಷ್ಟೆ ಎಂದರು.
ಭಾರತ ದೇಶದ ಜನರಿಗೆ ಬ್ರಿಟಿಷರು 70ವರ್ಷಗಳ ಹಿಂದೆ ಬಳುವಳಿಯಾಗಿ ಕೊಟ್ಟ ಇಂಗ್ಲಿಷ್ ಔಷಧಿ ಒಗ್ಗುವುದು ಕಷ್ಟ. ಏಕೆಂದರೆ ಮೂಲತಃ ಅದು ಭಾರತದ ಚಿಕಿತ್ಸಾ ಪದ್ಧ್ದತಿ ಅಲ್ಲ ಎಂಬುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಮ್ಮ ಭವಿಷ್ಯದ ಹಿತಕ್ಕಾಗಿ ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳಬೇಕೆಂದರೆ ಭಾರತೀಯ ವೈದ್ಯಕೀಯ ಚಿಕಿತ್ಸಾ ಪದ್ಧತಿ ಮೆಲುಕು ಹಾಕಿಯೆಂದು ಅವರು ಕಿವಿ ಮಾತು ಹೇಳಿದರು. ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಿಂದ ವಿದ್ಯಾರ್ಥಿಗಳಿಂದ ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಕುಶಾಲನಗರ ಪಟ್ಟಣ ಪಂಚಾಯತ್ ಅಧ್ಯಕ್ಷ ಎಂ.ಎಂ.ಚರಣ್ ಜಾಥಾಗೆ ಚಾಲನೆ ನೀಡಿದರು.
ಸೋಮವಾರಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ. ಪಾರ್ವತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೊಡಗು ಜಿಪಂ ಸದಸ್ಯೆ ಮಂಜುಳಾ, ಸೋಮವಾರಪೇಟೆ ತಾಪಂ ಸದಸ್ಯ ಡಿ.ಎನ್.ಗಣೇಶ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಆಶಾ, ಬಸವನಹಳ್ಳಿಯ ಎಂ.ಟಿ.ಎಚ್.ಯು ಆಡಳಿತ ವೈದ್ಯಾಧಿಕಾರಿ ಡಾ. ಚೇತನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಪಟ್ಟಣದ ಎಲ್ಲ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







