ತಮಿಳುನಾಡಿಗೆ ನೀರು ಬಿಡುಗಡೆ ಮುಂದೂಡಿಕೆ: ಇಂದು ವಿಶೇಷ ಅಧಿವೇಶನ

ಬೆಂಗಳೂರು, ಸೆ. 22: ತಮಿಳುನಾಡಿಗೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಈ ಬಗ್ಗೆ ಚರ್ಚಿಸಲು ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಧಾನ ಮಂಡಲದ ಉಭಯ ಸದನಗಳ ಮಹತ್ವದ ವಿಶೇಷ ಅಧಿವೇಶನ ನಡೆಯಲಿದೆ.
ಗುರುವಾರ ಬೆಳಗ್ಗೆ 10:30ರ ಸುಮಾರಿಗೆ ರಾಜಭವನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಅಧಿವೇಶನ ನಡೆಸಲು ಒಪ್ಪಿಗೆ ನೀಡುವಂತೆ ಮನವಿ ಮಾಡಿದರು. ರಾಜ್ಯಪಾಲರು ಸಮ್ಮತಿಸಿದ ಬೆನ್ನಲ್ಲೇ ಶಕ್ತಿಸೌಧದಲ್ಲಿ ವಿಶೇಷ ಅಧಿವೇಶನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.
ಒಕ್ಕೊರಲ ನಿರ್ಧಾರ: ಸುಪ್ರೀಂ ಕೋರ್ಟ್ ಸೆ.21ರಿಂದ 27ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದ್ದು, ನೀರು ಬಿಡುಗಡೆ ಮಾಡುವುದನ್ನು ಮುಂದೂಡಲು ವಿಧಾನ ಮಂಡಲ ಉಭಯ ಸದನಗಳಲ್ಲಿ ಒಕ್ಕೊರಲಿನ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆಯಿದೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಲೋಕಸಭೆ ಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ನಿನ್ನೆಯೆಷ್ಟೇ ಸರ್ವಪಕ್ಷ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಅಲ್ಲಿ ಹೊರಹೊಮ್ಮಿದ ಸಲಹೆ ಆಧರಿಸಿ ವಿಶೇಷ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದರು.
ಸಭಾ ನಾಯಕರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ‘ತಮಿಳುನಾಡಿಗೆ ನೀರು ಬಿಡುಗಡೆ ವಿಷಯವನ್ನು ಮುಂದೂಡಲು’ ಸದನದಲ್ಲಿ ನಿರ್ಣಯವನ್ನು ಮಂಡಿಸಲಿದ್ದಾರೆ. ಆ ಬಳಿಕ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿರುವ ನೀರು ಸೇರಿದಂತೆ ಅಲ್ಲಿನ ವಾಸ್ತವ ಸ್ಥಿತಿಯನ್ನು ಅವರು ಸದಸ್ಯರಿಗೆ ತಿಳಿಸಲಿದ್ದಾರೆ.
ಅಲ್ಲದೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮತ್ತು ರಾಜ್ಯ ಸರಕಾರದ ಪರ ವಕೀಲರು ಮಂಡಿಸಿದ ವಾದದ ಬಗ್ಗೆಯೂ ಚರ್ಚೆ ನಡೆಯಲಿದ್ದು, ಕಾವೇರಿ ನದಿ ನೀರಿನ ಹಂಚಿಕೆ ವಿವಾದದ ಬಗ್ಗೆಯೂ ಸುದೀರ್ಘ ಸಮಾಲೋಚನೆ ನಡೆಯಲಿದೆ. ಅಧಿಕೃತ ವಿಪಕ್ಷ ಬಿಜೆಪಿ, ಜೆಡಿಎಸ್ ಹಾಗೂ ಆಡಳಿತ ಪಕ್ಷದ ನಾಯಕರು ಹಾಗೂ ಹಿರಿಯ ಸದಸ್ಯರು ಮಾತನಾಡಲಿದ್ದಾರೆ.
ಕೋರ್ಟ್ ಆದೇಶ ಉಲ್ಲಂಘಿಸಿ ‘ನೀರು ಹರಿಸಲು ಸಾಧ್ಯವಿಲ್ಲ’ ಎಂದು ಮುಖ್ಯಮಂತ್ರಿ ವೈಯಕ್ತಿಕವಾಗಿ ಹೇಳಿದರೆ ಅದು ನ್ಯಾಯಾಂಗ ನಿಂದನೆಯಾಗಲಿದೆ. ಆದಕಾರಣ ವಿಧಾನ ಮಂಡಲವೇ ಅಂತಹ ನಿರ್ಣಯ ಕೈಗೊಂಡರೆ ರಾಜ್ಯದ ಎಲ್ಲ ಜನಪ್ರತಿನಿಧಿಗಳ ಸಾಮೂಹಿಕ ಹೊಣೆಯಾಗಲಿದ್ದು, ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಳ್ಳಬಹುದು.
ವಿಧಾನಸಭೆಯ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಹೊರಿಸಲು ಕಷ್ಟಸಾಧ್ಯ. ಹೀಗಾಗಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಲಿದ್ದು, ರಾಷ್ಟ್ರಪತಿ ಅಥವಾ ಪ್ರಧಾನಿ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯ ಸೃಷ್ಟಿಯಾಗಲಿದೆ ಎಂಬುದು ತಜ್ಞರ ಅಭಿಮತವಾಗಿದೆ.
ದಿಲ್ಲಿ ಅಂಗಳಕ್ಕೆ ಕಾವೇರಿ?
ನೀರು ಬಿಡುಗಡೆ ಮುಂದೂಡುವ ಜೊತೆಗೆ ಕೋರ್ಟ್ ತೀರ್ಪು ಪಾಲಿಸಲು ಸಾಧ್ಯವಿಲ್ಲವೆಂದು ಉಭಯ ಸದನಗಳು ಒಮ್ಮತದ ನಿರ್ಧಾರ ಕೈಗೊಳ್ಳಲಿವೆ. ಆ ತೀರ್ಮಾನವನ್ನು ಸುಪ್ರೀಂ ಕೋರ್ಟ್, ರಾಷ್ಟ್ರಪತಿ ಮತ್ತು ಪ್ರಧಾನಿಗೆ ರವಾನಿಸಲಾಗುವುದು. ಆ ನಂತರ ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡುವುದು ಅನಿವಾರ್ಯವಾಗಬಹುದು ಎನ್ನಲಾಗಿದೆ.







