ಗಾಂಧಿ ಜಯಂತಿ ಅಂಗವಾಗಿ ಜಿಲ್ಲೆಯಾದ್ಯಂತ ಸ್ವಚ್ಛತಾ ಸಪ್ತಾಹ: ಜಿಲ್ಲಾಧಿಕಾರಿ ನಕುಲ್
ಪೂರ್ವಭಾವಿ ಸಭೆ

ಕಾರವಾರ, ಸೆ.23: ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಿಂದ ಸ್ವಚ್ಛತಾ ಸಪ್ತಾಹವನ್ನು ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಮನವಿ ಮಾಡಿದರು.
ಅವರು ಶುಕ್ರವಾರ ಸ್ವಚ್ಛತಾ ಸಪ್ತಾಹ ಅನುಷ್ಠಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸ್ವಚ್ಛತಾ ಸಪ್ತಾಹದ ಅಂಗವಾಗಿ ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೆ ಸಂಪೂರ್ಣ ಸ್ವಚ್ಛತಾ ಕಾರ್ಯಕ್ರಮ, ಸ್ವಚ್ಛತೆ ಕುರಿತು ಜನರಲ್ಲಿ ಜಾಗೃತಿ ಕಾರ್ಯಕ್ರಮ, ಪ್ಲಾಸ್ಟಿಕ್ ಬಳಕೆ ಮಾಡದಂತೆ ಜನರಲ್ಲಿ ಮನವಿ ಹಾಗೂ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ ಅನುಷ್ಠಾನಕ್ಕೆ ಕ್ರಮ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಸಪ್ತಾಹದಲ್ಲಿ ಕೇವಲ ಸರಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾತ್ರ ಭಾಗವಹಿಸದೆ, ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.
ಕ್ರಿಯಾ ಯೋಜನೆ: ಅಕ್ಟೋಬರ್ 2ರಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರು ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಬಳಿಕ ಕಾರವಾರ ರವೀಂದ್ರನಾಥ್ ಕಡಲ ತೀರದಲ್ಲಿ ಸ್ವಚ್ಛತಾ ಸಪ್ತಾಹಕ್ಕೆ ಚಾಲನೆ ನೀಡುವರು. ಸಪ್ತಾಹವನ್ನು ಸಮರ್ಪಕವಾಗಿ ನಡೆಸಲು ಕಾರವಾರದಲ್ಲಿ 10 ತಂಡಗಳನ್ನು ರಚಿಸಲಾಗಿದೆ. ಮೊದಲ ಎರಡು ದಿನಗಳ ಕಾಲ ಕಡಲತೀರ ಹಾಗೂ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗುವುದು. ಮೀನುಗಾರರ ಸಂಘಗಳು ಸಹ ಇದರಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಎಲ್ಲ ಇಲಾಖೆಯ ಕಚೇರಿ ಆವರಣಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗುವುದು. ಕಚೇರಿಯಲ್ಲಿ ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ಸುಣ್ಣಬಣ್ಣ ಬಳಿಯಬೇಕು ಎಂದು ಹೇಳಿದರು.
ಸ್ವಚ್ಛತಾ ಸಪ್ತಾಹ ಕೇವಲ ಜಿಲ್ಲಾ ಮಟ್ಟಕ್ಕೆ ಮಾತ್ರ ಸೀಮಿತವಾಗಬಾರದು. ಪ್ರತಿಯೊಂದು ತಾಲೂಕಿನಲ್ಲಿಯೂ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು.ಆಯಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಅಧೀನ ಕಚೇರಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಸಪ್ತಾಹವನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಲು ಕ್ರಮ ಕೈಗೊಳ್ಳಬೇಕು. ಎಲ್ಲ ಆಸ್ಪತ್ರೆಗಳು, ಅಂಗನವಾಡಿ ಕಟ್ಟಡಗಳು, ಶಾಲಾ-ಕಾಲೇಜುಗಳು, ಬಸ್ ನಿಲ್ದಾಣಗಳು, ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ಥಳಗಳನ್ನು ಸ್ವಚ್ಛಗೊಳಿಸಿ ಜನರಲ್ಲೂ ಜಾಗೃತಿ ಮೂಡಿಸಬೇಕು ಎಂದರು.
ಸಪ್ತಾಹದ ಅವಧಿಯಲ್ಲಿ ಎಲ್ಲ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು ಎಂದರು. ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಹುಬ್ಬಳ್ಳಿ-ಅಂಕೋಲಾ ರೈಲ್ವೆ ವಿಶೇಷ ಭೂಸ್ವಾಧೀನಾಧಿಕಾರಿ ಸದಾಶಿವ ಪ್ರಭು, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.







