ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ: ಬಿ.ನಂದಕುಮಾರ್
ಕಾನೂನು ಅರಿವು ಕಾರ್ಯಕ್ರಮ

ಚಿಕ್ಕಮಗಳೂರು, ಸೆ.23: ಮನುಷ್ಯ ಆರೋಗ್ಯವಾಗಿರಲು ಸುತ್ತ ಮುತ್ತಲಿನ ಪರಿಸರ ಸ್ವಚ್ಛವಾಗಿರಬೇಕು. ಅದೇ ರೀತಿ ಸ್ವಸ್ಥ ಆರೋಗ್ಯ ಹೊಂದಲು ಪೌಷ್ಟಿಕ ಆಹಾರ ಸೇವನೆ ಮಹತ್ವವಾಗಿದೆ ಎಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಬಿ. ನಂದಕುಮಾರ್ ಹೇಳಿದರು.
ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮತ್ತಿತರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಉಪ್ಪಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಬಾಲ್ಯದಿಂದಲೇ ತಂದೆ ತಾಯಿಗಳು ಹಾಗೂ ಶಿಕ್ಷಕರು ಶುಚಿತ್ವ ಮತ್ತು ಪೌಷ್ಟಿಕ ಆಹಾರದ ಮಹತ್ವವನ್ನು ತಿಳಿಸಿಕೊಡುವುದರಿಂದ ಮಕ್ಕಳು ಬೆಳವಣಿಗೆಯ ಪ್ರತಿಯೊಂದು ಹಂತದಲ್ಲಿ ಶುಚಿತ್ವದ ಸಾರವನ್ನು ಅರಿತು, ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪುಷ್ಟಿದಾಯಕವಾಗಿರುತ್ತಾರೆ. ಪ್ರತಿಯೊಂದು ಕ್ಷೇತ್ರದಲ್ಲೂ ಕ್ರಿಯಾಶೀಲರಾಗಿ ಪಾಲ್ಗೊಂಡು ತಮ್ಮ ಸರ್ವತೋಮುಖ ಬೆಳವಣಿಗೆಯನ್ನು ಹೊಂದುತ್ತಾರೆಂದು ತಿಳಿಸಿದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಎಚ್. ದಯಾನಂದ್ ಮಾತನಾಡಿ, ಅಪೌಷ್ಟಿಕತೆ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ವಕೀಲರ ಸಂಘದ ಅಧ್ಯಕ್ಷ ಎಚ್.ಎಚ್ ಕೃಷ್ಣಮೂರ್ತಿ ಮಾತನಾಡಿ, ಮಕ್ಕಳ ಸಮೃದ್ಧ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತ್ಯಮೂಲ್ಯವಾಗಿದೆ. ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿ ಡಾ. ಎಂ.ಎಚ್ ರವೀಂದ್ರನಾಥ ರವರು ‘ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ’ ಹಾಗೂ ವಕೀಲರಾದ ಎಂ.ಗೋಪಿನಾಥ್ ರವರು ‘ಮಕ್ಕಳ ಸಂರಕ್ಷಣೆಗಾಗಿರುವ ಕಾನೂನುಗಳು ಹಾಗೂ ಪೊಲೀಸ್ ದೂರು ಪ್ರಾಧಿಕಾರದ ಅಸ್ಥಿತ್ವ ಮತ್ತು ಅದರ ಕಾರ್ಯಗಳು’ ಎಂಬ ವಿಷಯಗಳ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಉಪ್ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ದೀಪಿಕಾ ಅಧ್ಯಕ್ಷತೆೆ ವಹಿಸಿದ್ದರು.
ಈ ಸಂದರ್ಭದಲ್ಲಿ ಆರ್‌ಸಿಎಚ್ ಅಧಿಕಾರಿ ಡಾ. ಕಿರಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.







