ಖಾಸಗಿ ಸಹಭಾಗಿತ್ವ ದಲ್ಲಿ ಪ್ರವಾಸಿಗರಿಗೆ ಮೂಲ ಸೌಲಭ್ಯ
ಮಡಿಕೇರಿ: ಪ್ರವಾಸೋದ್ಯಮ ಸಮಿತಿ ಸಭೆ
ಮಡಿಕೇರಿ, ಸೆ.24: ಜಿಲ್ಲೆಯ ಪ್ರವಾಸಿ ಸ್ಥಳಗಳು ಹಾಗೂ ಧಾರ್ಮಿಕ ಕ್ಷೇತ್ರಗಳ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ರಸ್ತೆ ಬದಿ ಅಡುಗೆ ಮಾಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆಯ್ದ ಸ್ಥಳಗಳಲ್ಲಿ ಖಾಸಗಿಯವರ ಸಹಕಾರದಲ್ಲಿ ಅಡುಗೆ ಕೋಣೆ ನಿರ್ಮಾಣ ಹಾಗೂ ಕನಿಷ್ಠ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಶನಿವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆಯಲ್ಲಿ ಪ್ರವಾಸಿತಾಣಗಳ ಅಭಿವೃದ್ಧಿ ಹಾಗೂ ಪ್ರವಾಸಿಗರ ಸುರಕ್ಷತೆ ಕುರಿತು ಚರ್ಚಿಸಲಾಯಿತು.
ಕುಶಾಲನಗರ-ಮಡಿಕೇರಿ ನಡುವಿನ ಆನೆಕಾಡು ಪ್ರದೇಶ, ಗಾಂಧಿಮೈದಾನ, ಭಾಗಮಂಡಲ ಮತ್ತಿತರ ಕಡೆಗಳಲ್ಲಿ ಪ್ರವಾಸಿಗರು ರಸ್ತೆ ಬದಿ ಅಡುಗೆ ಮಾಡುವುದು, ಪ್ಲಾಸ್ಟಿಕ್ ಹಾಗೂ ಬಾಟಲ್‌ಗಳನ್ನು ಎಸೆಯುತ್ತಿರುತ್ತಾರೆ. ಆದ್ದರಿಂದ ರಸ್ತೆ ಬದಿ ಕಸದ ಬುಟ್ಟಿಗಳನ್ನು ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಇಡುವ ಬಗ್ಗೆ ಚಿಂತಿಸಬೇಕಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸಲಹೆ ನೀಡಿದರು. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ರಸ್ತೆ ಬದಿ ಅಡುಗೆ ಮಾಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆ ಮಾಡಬೇಕಿದೆ ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಜಿಲ್ಲೆಯ ಪ್ರವಾಸಿ ಸ್ಥಳಗಳು ಸೇರಿದಂತೆ ಮುಖ್ಯ ರಸ್ತೆ ಬದಿಗಳಲ್ಲಿ ಕಸದ ಬುಟ್ಟಿಗಳನ್ನು ಇಟ್ಟು ಪ್ರವಾಸಿಗರಲ್ಲಿ ಈ ಬಗ್ಗೆ ಅರಿವು ಮೂಡಿಸುವ ನಾಮ ಫಲಕಗಳನ್ನು ಅಳವಡಿಸಬೇಕಿದೆ ಎಂದರು. ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಪೂರಕ ವಾತಾವರಣವಿಲ್ಲದ ಕಾರಣ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಆ ದಿಸೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಸಹಾಯಧನ ಪಡೆಯುವಂತಾಗಲು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಸಲಹೆ ನೀಡಿದರು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸಿ.ಜಗನ್ನಾಥ್ ಮಾತನಾಡಿ, ಕುಶಾಲನಗರದ ಕಾವೇರಿ ನದಿ ಬಳಿ ಹಾಗೂ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪವೃತ್ತದ ಬಳಿ ಸಿಬ್ಬಂದಿ ಸಹಿತ ಪ್ರವಾಸಿ ಮಾಹಿತಿ ಕೇಂದ್ರ ಸ್ಥಾಪಿಸುವ ಬಗ್ಗೆ ಚಿರ್ಚಿಸಲಾಯಿತು.
ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ತಾಪಂ ಅಧ್ಯಕ್ಷೆ ತೆಕ್ಕಡೆ ಶೋಭಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಡಕುಂಡಲು, ಪೌರಾಯುಕ್ತೆ ಬಿ.ಬಿ. ಪುಷ್ಪಾವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಒ.ಆರ್. ಶ್ರೀರಂಗಪ್ಪ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಜಗನ್ನಾಥ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಜಾದವ್ ಹೋಂ ಸ್ಟೇ ಅಸೋಷಿಯೇಷನ್‌ನ ಉಪಾಧ್ಯಕ್ಷ ಮತ್ತಿತರರು ಉಪಸ್ಥಿತರಿದ್ದರು.







