ಸರಕಾರಿ ಶಾಲೆಗಳ ದತ್ತು ಯೋಜನೆ ಮತ್ತೆ ಆರಂಭ: ತನ್ವೀರ್ ಸೇಠ್

ಬೆಂಗಳೂರು, ಸೆ.24: ಸರಕಾರಿ ಶಾಲೆಗಳ ಅಭಿವೃದ್ಧಿಯ ದೃಷ್ಟಿಯಿಂದ ಅವುಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ‘ದತ್ತು’ ನೀಡುವ ಯೋಜನೆಯನ್ನು ಮರು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಇಂದಿಲ್ಲಿ ತಿಳಿಸಿದ್ದಾರೆ.
ಶನಿವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಜಾರಿಯಲ್ಲಿದ್ದ ದತ್ತು ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಆ ಯೋಜನೆಯನ್ನು ಮತ್ತೆ ಆರಂಭಿಸಲಾಗುವುದು ಎಂದರು.
ಖಾಸಗಿ ಸಂಸ್ಥೆಗಳು ಸರಕಾರಿ ಶಾಲೆಗಳನ್ನು ದತ್ತು ಪಡೆದು ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುತ್ತವೆ. ಇದರಿಂದ ಶಾಲೆಗಳ ಅಭಿವೃದ್ಧಿ ಸಾಧ್ಯವಾಗಲಿದೆ. ಅಲ್ಲದೆ, ಸರಕಾರಿ ಶಾಲೆಗಳ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡಲು ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಮ್ಮೇಳನಕ್ಕೆ ಅನುದಾನ ಹೆಚ್ಚಿಸಲು ಮನವಿ: ರಾಯಚೂರಿನಲ್ಲಿ ಡಿಸೆಂಬರ್ 18ರಂದು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಿಗದಿಪಡಿಸಿರುವ ಅನುದಾನವನ್ನು 2 ಕೋಟಿ ರೂ.ಗಳಿಂದ 10 ಕೋಟಿ ರೂ.ಗಳಿಗೆ ಹೆಚ್ಚಳ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಅಲ್ಲದೆ, ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಸೇಠ್ ಹೇಳಿದರು.
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ತಾನು, ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲು ಹಗಲಿರುಳು ಶ್ರಮಿಸ ಲಿದ್ದೇನೆ ಎಂದ ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಡಿನ ಸಾಹಿತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.
ಪ್ರತಿಭಟನೆ ಕೈಬಿಡಿ: ಕಾವೇರಿ ನದಿ ನೀರಿನ ಹಂಚಿಕೆಯ ಸಂಬಂಧ ವಿಧಾನ ಮಂಡಲ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ರಾಜ್ಯದ ರೈತರ ಹಿತರಕ್ಷಣೆಗಾಗಿ ಕ್ರಮ ಕೈಗೊಳ್ಳಲಾಗಿದೆ. ಈ ವಿಚಾರದಲ್ಲಿ ಯಾರೊಬ್ಬರೂ ರಾಜಕಾರಣ ಮಾಡಬಾರದು ಎಂದ ಸೇಠ್, ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಕೋರಿದರು.







