ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಿಶ್ಚಿತ:ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್
ಬೆಂಗಳೂರು,ಸೆ.26:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಮತ್ತೊಂದು ಅವಧಿಗೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಆಡಳಿತ ಮುಂದುವರಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ,ಗೃಹ ಸಚಿವ ಡಾ.ಜಿ. ಪರಮೇಶ್ವರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.ಸೋಮವಾರ ವಿಕಾಸಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಮೇಯರ್ ಸ್ಥಾನವನ್ನು ಕಾಂಗ್ರೆಸ್ ಪಕ್ಷವೇ ಉಳಿಸಿಕೊಳ್ಳಲಿದ್ದು, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿಗಳ ಕೆಲ ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸಂಬಂಧ ಸಮಾಲೋಚನೆ ನಡೆಸಲಾಗಿದೆ ಎಂದರು.
ಮೇಯರ್ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಲೋಚನೆ ಬಳಿಕ ತೀರ್ಮಾನಿಸಲಿದ್ದು, ಪ್ರಸಕ್ತ ಅವಧಿಗೂ ಪಾಲಿಕೆಯಲ್ಲಿ ಮೈತ್ರಿ ಆಡಳಿತ ಮುಂದುವರಿಯಲಿದೆ ಎಂದು ಅವರು ಮಾಹಿತಿ ನೀಡಿದರು.
ಬೆಂಗಳೂರು ನಗರದ ಅಭಿವೃದ್ಧಿ ದೃಷ್ಟಿಯಿಂದ ಮೈತ್ರಿ ನಿರ್ಣಯ ಕೈಗೊಳ್ಳಲಾಗಿದೆ. ಮೈತ್ರಿಗೆ ಕುಮಾರಸ್ವಾಮಿ ಸಮ್ಮತಿ ಸೂಚಿಸಿದ್ದಾರೆಂದ ಅವರು, ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳ ಪೈಕಿ ಜೆಡಿಎಸ್‌ಗೆ ಎಷ್ಟು ಸ್ಥಾನಗಳನ್ನು ಬಿಟ್ಟುಕೊಡಬೇಕೆಂಬ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.