ಪುತ್ತೂರು ಸರಕಾರಿ ಆಸ್ಪತ್ರೆಗೆ ಹೆಚ್ಚುವರಿ ಡಯಾಲಿಸಿಸ್ ಯಂತ್ರ ಅಳವಡಿಸಲು ಕ್ರಮ: ಮೀನಾಕ್ಷಿ ಶಾಂತಿಗೋಡು

ಪುತ್ತೂರು, ಸೆ,.28: ಪುತ್ತೂರು ಸರಕಾರಿ ಆಸ್ಪತ್ರೆಯ ಪ್ರಮುಖ ಅಗತ್ಯವಾಗಿರುವ ಹೆಚ್ಚುವರಿ ಡಯಾಲಿಸಿಸ್ ಯಂತ್ರ ಅಳವಡಿಕೆಗೆ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಭರವಸೆ ನೀಡಿದ್ದಾರೆ. ಅವರು ಬುಧವಾರ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆಸ್ಪತ್ರೆಯಲ್ಲಿ ಒಂದು ಡಯಾಲಿಸಿಸ್ ಯಂತ್ರವಿದೆ. ಆದರೆ ರೋಗಿಗಳ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚಿನ ಆರೋಗ್ಯ ಸೇವೆ ನೀಡಲು ಈಗಾಗಲೇ ಹೆಚ್ಚುವರಿ ಡಯಾಲಿಸಿಸ್ ಯಂತ್ರ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ತುರ್ತು ಸಂದರ್ಭದಲ್ಲಿ ಅಗತ್ಯ ಔಷಧಿಗಳು ಸಮರ್ಪಕವಾಗಿ ದೊರಕುವ ವ್ಯವಸ್ಥೆ ಮಾಡಬೇಕು ಎಂದು ಅವರು ಆಸ್ಪತ್ರೆಯ ಸಿಬ್ಬಂದಿಗೆ ಸೂಚನೆ ನೀಡಿದರು.
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 75 ರೋಗಿಗಳು ಡಯಾಲಿಸಿಸ್ ಚಿಕಿತ್ಸೆಗೆ ಹೆಸರು ದಾಖಲಿಸಿಕೊಂಡಿದ್ದು, ದಿನವೊಂದಕ್ಕೆ ಕೇವಲ 3 ರೋಗಿಗಳಿಗೆ ಮಾತ್ರ ಡಯಾಲಿಸಿಸ್ ಚಿಕಿತ್ಸೆ ನೀಡಲು ಸಾಧ್ಯಾವಾಗುತ್ತಿದೆ. ಹೆಚ್ಚುವರಿ ಡಯಾಲಿಸಿಸ್ ಯಂತ್ರದ ಅಗತ್ಯತೆಯ ಕುರಿತು ಈಗಾಗಲೇ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯಾಧಿಕಾರಿ ಡಾ. ಪ್ರದೀಪ್ ಜಿ.ಪಂ. ಅಧ್ಯಕ್ಷರಿಗೆ ತಿಳಿಸಿದರು.
ಈ ಬಗ್ಗೆ ತಾನು ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಅಧ್ಯಕ್ಷರು ತಿಳಿಸಿದರು.







