ಎರಡು ರಾಜ್ಯಗಳ ವಾಸ್ತವ ಸ್ಥಿತಿಯನ್ನು ಅರಿತುಕೊಂಡು ಕೇಂದ್ರ ಸರಕಾರ ಕ್ರಮಕೈಗೊಳ್ಳಲಿ : ಯಡಿಯೂರಪ್ಪ

ಹೊಸದಿಲ್ಲಿ, ಸೆ.28: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಎರಡೂ ರಾಜ್ಯಗಳ ವಾಸ್ತವ ಸ್ಥಿತಿಯನ್ನು ಅರಿಯಲು ತಜ್ಞರ ತಂಡವನ್ನು ಕಳುಹಿಸುವಂತೆ ಇಂದು ರಾಜ್ಯದ ಬಿಜೆಪಿ ಸಂಸದರು ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಅಕ್ಬರ್ ರಸ್ತೆಯಲ್ಲಿರುವ ಸಚಿವೆ ಉಮಾಭಾರತಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಸಂಸದರು ಕಾವೇರಿ ಜಲವಿವಾದಕ್ಕೆ ಸಂಬಂಧಿಸಿ ಸಚಿವರೊಂದಿಗೆ ಚರ್ಚೆ ನಡೆಸಿದರು.
ರಾಜ್ಯದ ವಾಸ್ತವ ಸ್ಥಿತಿಯನ್ನು ಸಚಿವರಿಗೆ ಮನವರಿಕೆ ಮಾಡಲಾಗಿದೆ. ಎರಡೂ ರಾಜ್ಯಗಳಿಗೂ ತಜ್ಞರ ತಂಡ ಕಳುಸುವಂತೆ ಮತ್ತು ಎರಡು ರಾಜ್ಯಗಳ ವಾಸ್ತವ ಸ್ಥಿತಿಯನ್ನು ಅರಿತುಕೊಂಡು ಕ್ರಮಕೈಗೊಳ್ಳುವಂತೆ ಕೇಂದ್ರ ಜಲ ಸಂಪನ್ಮೂಲ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಸಭೆಯ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯದ ಜಲಾಶಗಳಲ್ಲಿ ನೀರಿಲ್ಲ. ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಸಚಿವೆ ಉಮಭಾರತಿ ಅವರಿಗೆ ಮನವರಿಕೆ ಮಾಡಲಾಗಿದೆ ಎಂದು ಅವರು ವಿವರಿಸಿದರು.





