ರಾಯಣ್ಣ ಬ್ರಿಗೇಡ್‌ಗೂ, ಬಿಜೆಪಿಗೂ ಸಂಬಂಧವಿಲ್ಲ: ರವಿಕುಮಾರ್

ಬೆಂಗಳೂರು, ಸೆ. 30: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಾಳೆ (ಅ.1) ಹಾವೇರಿಯಲ್ಲಿ ನಡೆಸಲು ಉದ್ದೇಶಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ಶುಕ್ರವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡ ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ಮುಖಂಡರು. ಆದರೆ, ಹಾವೇರಿಯಲ್ಲಿ ನಡೆಯಲಿರುವ ಬ್ರಿಗೇಡ್ ಸಮಾವೇಶ ಬಿಜೆಪಿ ಕಾರ್ಯಕ್ರಮವಲ್ಲ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಉತ್ತರಿಸಿದರು.
ಕಾರ್ಯಕಾರಿಣಿ: ಬೆಳಗಾವಿಯಲ್ಲಿ ಅ.3ರಿಂದ ಎರಡು ದಿನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಹಮ್ಮಿಕೊಂಡಿದ್ದು, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಅನಂತಕುಮಾರ್, ಡಿ.ವಿ.ಸದಾನಂದ ಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರುಳೀಧರ್ ರಾವ್, ಬಿಜೆಪಿ ರಾಜಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಪಕ್ಷದ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ಶತಮಾನೋತ್ಸವ ಆಚರಿಸಲಾಗುವುದು. ಅಲ್ಲದೆ, ದಲಿತ, ಶೋಷಿತರ ಏಳ್ಗೆಗಾಗಿ ಕೇಂದ್ರ ಸರಕಾರ ರೂಪಿಸಿರುವ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.







