ಕುಸ್ತಿ: ಸೂರಜ್ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಕೊಣಾಜೆ, ಅ.1: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಸೂರಜ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್(ರಿ) ಮಂಗಳೂರು ಇವರ ಸಹಯೋಗದೊಂದಿಗೆ ಸೂರಜ್ ಪದವಿ ಪೂರ್ವ ಕಾಲೇಜು ಮುಡಿಪುವಿನಲ್ಲಿ ಶುಕ್ರವಾರ ನಡೆದ ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜು ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಮುಡಿಪುವಿನ ಸೂರಜ್ ಪದವಿ ಪೂರ್ವ ಕಾಲೇಜು ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರೆ, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗೋಕರ್ಣನಾಥೇಶ್ವರ ಕಾಲೇಜು ಹಾಗೂ ಬಾಲಕಿಯರ ವಿಭಾಗದಲ್ಲಿ ಸೂರಜ್ ಪದವಿ ಪೂರ್ವ ಕಾಲೇಜು ಮುಡಿಪು ಪಡೆದುಕೊಂಡಿತು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಮೊಯ್ದಿನ್ ಬಾವ, ಅಖಿಲ ಭಾರತ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಹೈದರ್ ಪರ್ತಿಪ್ಪಾಡಿ, ಅತಿಥಿಗಳಾಗಿ ಮಂಗಳೂರು ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ರಾಜ್ ಗೋಪಾಲ್ ರೈ, ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಮುಂತಾದವರು ಉಪಸ್ಥಿತರಿದ್ದರು.
ಸಂಸ್ಥೆಯ ಅಧ್ಯಕ್ಷ ಡಾ. ಮಂಜುನಾಥ್ ಎಸ್. ರೇವಣ್ಕರ್ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕಿ ಹೇಮಲತಾ ಎಂ. ರೇವಣ್ಕರ್ ಹಾಗೂ ಸೂರಜ್ ಶಿಕ್ಷಣ ಸಂಸ್ಥೆಯ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಸಕ ಮೊಯ್ದಿನ್ ಬಾವಾ ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಿದರು.







