ಮುಖ್ಯಮಂತ್ರಿ ಪ್ರಧಾನಿ ಮಧ್ಯೆಸ್ಥಿಕೆಗೆ ಅರ್ಥವಿಲ್ಲ: ಸದಾನಂದ ಗೌಡ

ಬೆಂಗಳೂರು, ಅ. 2: ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಪದೇ ಪದೇ ಆಗ್ರಹಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಪ್ರಕರಣ ನ್ಯಾಯಾಲಯದಲ್ಲಿರುವ ವೇಳೆ ಪ್ರಧಾನಿ ಮಧ್ಯೆಸ್ಥಿಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇಂದಿಲ್ಲಿ ಹೇಳಿದ್ದಾರೆ.
ರವಿವಾರ ಮಲ್ಲೇಶ್ವರಂ, ಮಾರಮ್ಮ ದೇವಸ್ಥಾನ ವೃತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರವೂ ಸುಮ್ಮನೆ ಕುಳಿತಿಲ್ಲ, ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ಸಂಧಾನ ಸಭೆ ನಡೆಸಿದ್ದಾರೆ. ಆದರೆ, ತಮಿಳುನಾಡಿ ತನ್ನ ಹಠಮಾರಿ ಧೋರಣೆ ಹಿನ್ನೆಲೆಯಲ್ಲಿ ಸಭೆ ವಿಫಲವಾಗಿದೆ ಎಂದರು. ಕಾವೇರಿ ವಿಚಾರದಲ್ಲಿ ರಾಜ್ಯದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಈ ವಿಚಾರದ ಬಗ್ಗೆ ಎಲ್ಲ ಮಾಹಿತಿ ಪಡೆದುಕೊಂಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರೊಂದಿಗೂ ಚರ್ಚೆ ನಡೆಸಿದ್ದಾರೆ ಎಂದು ಅವರು ಹೇಳಿದರು.
ಕಾವೇರಿ ವಿವಾದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ವೇಳೆ ಸೂಕ್ಷ್ಮ ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದ ಅವರು, ನವರಾತ್ರಿಯ ಈ ಶುಭ ಸಂದರ್ಭದಲ್ಲಿ ಕಾವೇರಿ ವಿವಾದ ಬಗೆಹರಿಯಲಿ. ನೀರು ಕೇಳುತ್ತಿರುವವರಿಗೆ ರಾಜ್ಯದ ಸಂಕಷ್ಟ ಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ಪ್ರಾರ್ಥಿಸುವೆ ಎಂದರು.





