ಬ್ಯಾರವಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ, ಬಯಲು ಬಹಿರ್ದೆಸೆ ಮುಕ್ತ ಪಂಚಾಯತ್ ಗೌರವ

ಚಿಕ್ಕಮಗಳೂರು, ಅ.9: ಸರಕಾರದ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಬ್ಯಾರವಳ್ಳಿ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಪಂಚಾಯತ್ ಗೌರವ ಲಭಿಸಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಅವರು ಗ್ರಾಪಂ ಅಧ್ಯಕ್ಷೆ ಬಿ.ಪಿ. ಆರತಿ ಮತ್ತು ಪಂಚಾಯತ್ ಅಭಿವೃದ್ಧ್ದಿ ಅಧಿಕಾರಿ ಎನ್.ಎಸ್. ಜಗನ್ನಾಥ್ ಅವರಿಗೆ ಪ್ರಶಸ್ತಿ ವಿತರಿಸಿದರು.
ಶನಿವಾರ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕರಾದ ಸಿ.ಟಿ.ರವಿ ಮತ್ತು ಬಿ.ಬಿ.ನಿಂಗಯ್ಯ ಅವರು ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಪಂಚಾಯತ್ ಹೆಗ್ಗಳಿಕೆಗೆ ಪಾತ್ರವಾಗಿರುವ 20 ಗ್ರಾಪಂಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಜಿ. ಸತ್ಯವತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ.ಆರ್. ರಾಗಪ್ರಿಯ, ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ತಾಪಂ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಸುರೇಶ್, ಕಾರ್ಯ ನಿರ್ವಾಹಕ ಅಧಿಕಾರಿ ಸುಂದರೇಶ್ ಮತ್ತಿತರರು ಉಪಸ್ಥಿತರಿದ್ದರು.





