6 ಸಾವಿರ ಕೋಟಿ ರೂ.ನಷ್ಟ, ನೆರವು ಕೋರಿ ಕೇಂದ್ರಕ್ಕೆ ಮನವಿ: ಸಚಿವ ಕಾಗೋಡು
ಬರ ಪರಿಸ್ಥಿತಿ

ಬೆಂಗಳೂರು, ಅ. 13: ಪ್ರಸಕ್ತ ವರ್ಷವು ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಸೃಷ್ಟಿಯಾಗಿದ್ದು, ಸುಮಾರು 6 ಸಾವಿರ ಕೋಟಿ ರೂ.ಗಳಿಗೂ ಅಧಿಕ ನಷ್ಟ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಸೂಕ್ತ ನೆರವು ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಒಟ್ಟು 110ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಬರ ಪೀಡಿತ ತಾಲೂಕುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದರು.
ರಾಜ್ಯದಲ್ಲಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಆಗಿರುವ ಬೆಳೆ ಹಾನಿ ಸೇರಿದಂತೆ ಇನ್ನಿತರ ಹಾನಿಯ ಬಗ್ಗೆ ಶೀಘ್ರದಲ್ಲೆ ಅಂದಾಜಿಸಿ ಸೂಕ್ತ ನೆರವು ಕೋರಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ಅನಂತರ ಕೇಂದ್ರ ತಜ್ಞರ ತಂಡವೊಂದನ್ನು ರಾಜ್ಯಕ್ಕೆ ಕಳುಹಿಸಿ ವಾಸ್ತವ ಸ್ಥಿತಿಯನ್ನು ಅಧ್ಯಯನ ನಡೆಸಲಿದೆ ಎಂದರು.
ತುರ್ತು ಕ್ರಮಕ್ಕೆ ಸೂಚನೆ: ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು-ನೀರು ಹಾಗೂ ಜನರಿಗೆ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರುವಂತೆ ನಿರ್ದೇಶಿಸಲಾಗಿದೆ ಎಂದು ಅವರು ಹೇಳಿದರು.
ಈರುಳ್ಳಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿರುವುದು ರಾಜ್ಯ ಸರಕಾರದ ಗಮನಕ್ಕೆ ಬಂದಿದೆ. ಈ ಸಂಬಂಧ ಕೃಷಿ ಸಚಿವ ಕೃಷ್ಣ ಬೈರೇಗೌಡ ಜತೆ ಸಮಾಲೋಚನೆ ನಡೆಸಿ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ನೆರೆ ಹಾವಳಿಗೆ ತುತ್ತಾಗಿದ್ದ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಕ್ರಮವಾಗಿ 50 ಕೋಟಿ ರೂ. ಮತ್ತು 25 ಕೋಟಿ ರೂ.ಗಳ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗಿದೆ. ಬರ ಮತ್ತು ನೆರೆ ಹಾವಳಿ ಸಂಬಂಧ ಪ್ರತ್ಯೇಕ ಮನವಿ ಸಿದ್ದಪಡಿಸಿ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಬಗರ್ ಹುಕುಂ ಸಾಗುವಳಿಗೆ ಸಂಬಂಧಿಸಿದ ಅರ್ಜಿಗಳ ವಿಲೇಗೆ ಡಿಸೆಂಬರ್ ವರೆಗೆ ಗಡುವು ನೀಡಿದ್ದು, ಪ್ರತಿವಾರ ಸಭೆ ನಡೆಸಲು ಸೂಚಿಸಲಾಗಿದೆ. ಬಗರ್ ಹುಕುಂ ಸಾಗುವಳಿ ಸಂಬಂಧದ ಈವರೆಗೂ ಆಗಿರುವ ಅರ್ಜಿಗಳ ವಿಲೇ ಬಗ್ಗೆ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ
-ಕಾಗೋಡು ತಿಮ್ಮಪ್ಪ ಕಂದಾಯ ಸಚಿವ







