ಇಂದು ಬುಡಕಟ್ಟು ಕೃಷಿಕರ ಸಂಘದಿಂದ ಪ್ರತಿಭಟನೆ
ಮಡಿಕೇರಿ: ಹತ್ತು ವರ್ಷ ಕಳೆದರೂ ಅನುಷ್ಠಾನಗೊಳ್ಳದ ಅರಣ್ಯ ಹಕ್ಕು ಮಸೂದೆ

ಮಡಿಕೇರಿ, ಅ.13: ನ್ಯಾಯಾಲಯದ ಕಟ್ಟುನಿಟ್ಟಿನ ಆದೇಶವಿದ್ದರೂ ಕಳೆದ ಹತ್ತು ವರ್ಷಗಳಿಂದ ಆದಿವಾಸಿ ಅರಣ್ಯ ಹಕ್ಕು ಮಸೂದೆ ಅನುಷ್ಠಾನಗೊಂಡಿಲ್ಲ. ಜಿಲ್ಲಾಡಳಿತದ ಈ ಕ್ರಮವನ್ನು ಖಂಡಿಸಿ ಅ.14 ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ ಎಂದು ಬುಡಕಟ್ಟು ಕೃಷಿಕರ ಸಂಘದ ಜಿಲ್ಲಾಧ್ಯಕ್ಷ ಜೆ.ಪಿ.ರಾಜು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ಅಂತ್ಯದೊಳಗೆ ಆದಿವಾಸಿ ಅರಣ್ಯ ಹಕ್ಕು ಮಸೂದೆಯನ್ನು ಅನುಷ್ಠಾನಗೊಳಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ರಾಜು ಎಚ್ಚರಿಕೆ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಆದಿವಾಸಿಗಳನ್ನು ಕಡೆಗಣಿಸಲಾಗುತ್ತಿದೆ. ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಯಾವುದೇ ಹಕ್ಕುಗಳು ಸಿಗುತ್ತಿಲ್ಲ. 2006ರಲ್ಲೇ ಅರಣ್ಯ ಹಕ್ಕು ಮಸೂದೆ ಜಾರಿಯಾಗಿದ್ದರೂ ಜಿಲ್ಲೆಯಲ್ಲಿ ಅಧಿಕಾರಿಗಳು ಬದಲಾವಣೆಯಾಗುತ್ತಿದ್ದಾರೆಯೆ ಹೊರತು ಕಾಯ್ದೆ ಮಾತ್ರ ಅನುಷ್ಠಾನಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹಾಡಿಯಲ್ಲಿರುವ ಗಿರಿಜನರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಭೂಮಿಯ ಹಕ್ಕು ಪತ್ರ ನೀಡದೆ ಸತಾಯಿಸಲಾಗುತ್ತಿದೆ. ಕುಡಿಯುವ ನೀರು, ಪೌಷ್ಟಿಕ ಆಹಾರ, ಆರೋಗ್ಯ ಸಂಬಂಧಿತ ಸೌಲಭ್ಯಗಳು, ಶಿಕ್ಷಣ, ಉದ್ಯೋಗ ಇತ್ಯಾದಿ ಸೌಲಭ್ಯಗಳಿಂದಲೂ ವಂಚಿತರಾಗಿದ್ದಾರೆ. ಅರಣ್ಯ ಹಕ್ಕು ಕಾಯ್ದೆಯ ಪ್ರಕಾರ ತಲಾ 10 ಎಕರೆ ಭೂಮಿಯನ್ನು ಮಂಜೂರು ಮಾಡಬೇಕೆನ್ನುವ ನಿಯಮ ಇದ್ದರೂ ನಾಗರಹೊಳೆ ವ್ಯಾಪ್ತಿಯಲ್ಲಿ ಕೇವಲ ಮನೆ ನಿರ್ಮಿಸಲು ಅಗತ್ಯವಿರುವಷ್ಟು ಜಾಗವನ್ನು ಮಾತ್ರ ಮಂಜೂರು ಮಾಡಲಾಗುತ್ತಿದೆ. ಕನಿಷ್ಠ 5 ಎಕರೆ ಭೂಮಿಯನ್ನಾದರೂ ಮಂಜೂರು ಮಾಡಬೇಕು ಮತ್ತು ಅರಣ್ಯ ಹಕ್ಕು ಕಾಯ್ದೆಯ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಅ.14 ರಂದು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೆರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು.
ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಆರ್.ಕೆ. ಚಂದ್ರು ಮಾತನಾಡಿ, ಹಾಡಿಗಳಲ್ಲಿ ಕಳ್ಳಭಟ್ಟಿ ದಂಧೆ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆಗೆ ದೂರು ನೀಡಿದರೆ, ನೀವೇ ಆರೋಪಿಗಳನ್ನು ಹಿಡಿದು ಕೊಡಿ ಎಂದು ಹೇಳುತ್ತಾರೆ. ಪರಿಸ್ಥಿತಿ ಈ ರೀತಿಯಾದರೆ, ಪೊಲೀಸ್ ಇಲಾಖೆಯ ಅಗತ್ಯವೇನಿದೆ ಎಂದು ಚಂದ್ರು ಪ್ರಶ್ನಿಸಿದರು.
ಕುಡಿಯ ಜನಾಂಗವನ್ನು ಮೂಲ ಆದಿವಾಸಿ ಗುಂಪಿಗೆ ಸೇರ್ಪಡೆಗೊಳಿಸದಿರುವುದರಿಂದ ಪೌಷ್ಟಿಕ ಆಹಾರ ಸೇರಿದಂತೆ ಸರಕಾರದ ಕೆಲವು ಸೌಲಭ್ಯಗಳು ಲಭ್ಯವಾಗುತ್ತಿಲ್ಲ. ಆದ್ದರಿಂದ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿ ಕುಡಿಯ ಜನಾಂಗವನ್ನು ಮೂಲ ಆದಿವಾಸಿ ಗುಂಪಿಗೆ ಸೇರ್ಪಡೆ ಗೊಳಿಸಬೆೇಕೆಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪಿ.ಎಸ್. ಮುತ್ತ, ಜೆ.ಕೆ. ರಾಮು ಉಪಸ್ಥಿತರಿದ್ದರು.







