ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಿ: ನ್ಯಾ. ಪ್ರಭಾವತಿ ಎಂ. ಹಿರೇಮಠ್
ಕಾನೂನು ಸಾಕ್ಷರತಾ ರಥ ಪ್ರವಾಸಕ್ಕೆ ಚಾಲನೆ

ಚಿಕ್ಕಮಗಳೂರು, ಅ.14: ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿಕೊಡುವ ಮೂಲಕ ನ್ಯಾಯ ವಂಚಿತನಾಗದಂತೆ ತಪ್ಪಿಸುವುದೇ ಕಾನೂನು ಸೇವಾ ಪ್ರಾಧಿಕಾರದ ಆಶಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಪ್ರಭಾವತಿ ಎಂ. ಹಿರೇಮಠ್ ಹೇಳಿದರು.
ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಚೇತನ ಎಂ.ಐ.ಎಂ.ಎಸ್ ಕಾಲೇಜು, ಮತ್ತಿತರ ಸರಕಾರಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಕಾನೂನು ಸಾಕ್ಷರತಾ ರಥ ಪ್ರವಾಸದ ಅಂಗವಾಗಿ ಆಯೋಜಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ನಾಗರಿಕನಿಗೂ ಕಾನೂನು ತಿಳುವಳಿಕೆ ಇರಬೇಕೆಂಬ ಉದ್ದೇಶದೊಂದಿಗೆ, ಕಾನೂನು ಸೇವಾ ಪ್ರಾಧಿಕಾರವು ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರದ ಧ್ಯೇಯೋದ್ದೇಶಗಳನ್ನು ಪ್ರಸಾರ ಮಾಡುವ ಮೂಲಕ ಕಾನೂನು ಪ್ರಸಾರದ ಕಾರ್ಯದಲ್ಲಿ ಕೈ ಜೋಡಿಸುವಂತೆ ಕರೆ ನೀಡಿದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ದಯಾನಂದ ವಿ. ಹಿರೇಮಠ್ ‘ಪೊಲೀಸ್ ದೂರು ಪ್ರಾಧಿಕಾರಗಳ ಅಸ್ತಿತ್ವ ಮತ್ತು ಅದರ ಕಾರ್ಯಗಳು’ ಎಂಬ ವಿಚಾರದ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಕಾನೂನು ಸಾಕ್ಷರತಾ ರಥ ಪ್ರವಾಸಕ್ಕೆ ಪ್ರಭಾವತಿ ಎಂ. ಹಿರೇಮಠ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಅಧ್ಯಕ್ಷತೆ ವಹಿಸಿದ್ದರು. ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ನಂದ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಅಣ್ಣಪ್ಪ ನಾಯಕ್, ಜಿಪಂ ಉಪ ಕಾರ್ಯದರ್ಶಿ ರಾಜಗೋಪಾಲ್, ವಕೀಲರ ಸಂಘದ ಅಧ್ಯಕ್ಷ ಎಚ್.ಎಚ್. ಕೃಷ್ಣಮೂರ್ತಿ, ಕಾರ್ಯದರ್ಶಿ ಎನ್. ಆರ್ ತೇಜಸ್ವಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶೇಖರ್ ಸ್ವಾಗತಿಸಿದರು. ಶ್ರೀನಿವಾಸ್ ನಿರೂಪಿಸಿ, ವಂದಿಸಿದರು.







