ಅ.23ಕ್ಕೆ ರಾಜ್ಯ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸಮ್ಮೇಳನ
ಉಡುಪಿ, ಅ.14: ಹೊಸದಿಲ್ಲಿಯ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘಕ್ಕೆ ಸಂಯೋಜಿಸಲ್ಪಟ್ಟ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮ್ಮೇಳನ ಅ.23ರಂದು ಬೆಳಗ್ಗೆ 10ಕ್ಕೆ ನಗರದ ಶ್ರೀಕೃಷ್ಣ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ 6ನೆ ಸಮ್ಮೇಳನ ಡಿ.19, 20 ಮತ್ತು 21ರಂದು ಕುಂದಾಪುರದಲ್ಲಿ ನಡೆಯಲಿದೆ. ಈ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ರಾಜ್ಯಾದ್ಯಂತ ಗ್ರಾಮ, ತಾಲೂಕು, ಜಿಲ್ಲಾ ಸಮ್ಮೇಳನ ನಡೆಯುತ್ತಿದ್ದು ಇದರ ಭಾಗವಾಗಿ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮ್ಮೇಳನವು ನಡೆಯುತ್ತಿದೆ. ಜಿಲ್ಲಾ ಸಮ್ಮೇಳನವನ್ನು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ನಿತ್ಯಾನಂದ ಸ್ವಾಮಿ ಉದ್ಘಾಟಿಸಿ, ಜೈಲ್ಭರೋ ಹೋರಾಟಕ್ಕೆ ಕಾರ್ಯಕ್ರಮಕ್ಕೆ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಇದರಲ್ಲಿ ಜಿಲ್ಲೆಯ ಮೂರು ತಾಲೂಕುಗಳ ಆಯ್ದ ಪ್ರತಿನಿಧಿ ಮುಖಂಡರು ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.