ಕ್ರೀಡಾಪಟುಗಳಿಗೆ 5ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ: ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ, ಅ.17: ಕಬಡ್ಡಿಯಂತಹ ಅಪಾಯಕಾರಿ ಕ್ರೀಡೆಗಳಲ್ಲಿ ಗಾಯಗೊಂಡ ಕ್ರೀಡಾಪಟುಗಳ ವೈದ್ಯಕೀಯ ಚಿಕಿತ್ಸೆಗಾಗಿ ಐದು ಲಕ್ಷ ರೂ.ವರೆಗೆ ಆರೋಗ್ಯ ವಿಮೆ ನೀಡುವ ಅಂಶವನ್ನು ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ನೂತನ ಕ್ರೀಡಾ ನೀತಿಯಲ್ಲಿ ಸೇರ್ಪಡೆಗೊಳಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸೋಮವಾರ ಆರಂಭಗೊಂಡ ಎರಡು ದಿನಗಳ ಮಂಗಳೂರು ವಿವಿ ಅಂತರ್ ಕಾಲೇಜು ಉಡುಪಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಕಬಡ್ಡಿಯಂತಹ ಕ್ರೀಡೆಯಲ್ಲಿ ಸಾಕಷ್ಟು ಕ್ರೀಡಾಪಟುಗಳು ಗಾಯಗಳಾಗಿ ಅಂಗವೈಕಲ್ಯತೆಗೆ ತುತ್ತಾಗುತ್ತಾರೆ. ಮುಂದೆ ಈ ಯಾವುದೇ ಸಮಸ್ಯೆ ಇಲ್ಲದೆ ನಿರ್ಭಿತಿಯಿಂದ ಆಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲು ಸರಕಾರ ಚಿಂತನೆ ನಡೆಸುತ್ತಿದೆ. ಇದರ ಪ್ರೀಮಿಯಂನ್ನು ಸರಕಾರವೇ ಭರಿಸಲಿದೆ ಎಂದು ಅವರು ಹೇಳಿದರು.
ಪಂದ್ಯಾಟವನ್ನು ಉದ್ಘಾಟಿಸಿದ ಉಡುಪಿ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಜೀವನದಲ್ಲಿ ಗುರಿ ತಲುಪುವಾಗ ವಿಘ್ನಗಳು ಬರುವುದು ಸಾಮಾನ್ಯ. ಕಬಡ್ಡಿ ಆಟದಲ್ಲಿರುವಂತೆ ಅದನ್ನು ತಪ್ಪಿಸಿಕೊಂಡು ಮುಂದೆ ಸಾಗುವವನು ವಿಜಯಿ ಆಗುತ್ತಾನೆ. ಯೋಗ ಮತ್ತು ಕಬಡ್ಡಿ ಆಟಕ್ಕೆ ಹೋಲಿಕೆ ಇದೆ. ಎರಡಲ್ಲೂ ತಮ್ಮ ದೈಹಿಕ ಆರೋಗ್ಯವನ್ನು ಉತ್ತಮಗೊಳಿಸಬಹುದು ಎಂದರು.
ಕಾಲೇಜಿನ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಡಾ.ಜಿ.ಎಸ್. ಚಂದ್ರಶೇಖರ್, ಕೋಶಾಧಿಕಾರಿ ಪ್ರದೀಪ್ ಕುಮಾರ್, ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಪ್ರಸನ್ನ ಕುಮಾರ್, ಮಂಗ ಳೂರು ವಿವಿ ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ವೇಣುಗೋಪಾಲ್ ನೊಂಡ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್ ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಗದೀಶ್ ಶೆಟ್ಟಿ ವಹಿಸಿದ್ದರು. ಉಪನ್ಯಾಸಕ ಡಾ.ಶ್ರೀಕಾಂತ್ ರಾವ್ ಸಿದ್ಧಾಪುರ ಸ್ವಾಗತಿಸಿದರು. ಅಶ್ವತ್ಥ ಭಾರಧ್ವಾಜ್ ಕಾರ್ಯಕ್ರಮ ನಿರೂಪಿಸಿದರು.







