ವಿಶ್ವಾಸ ಕಳೆದುಕೊಳ್ಳುತ್ತಿರುವ ರಾಷ್ಟ್ರೀಯ ಪಕ್ಷಗಳು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಭಿಪ್ರಾಯ

ಶಿವಮೊಗ್ಗ, ಅ.17: ಇಂದು ರಾಷ್ಟ್ರೀಯ ಪಕ್ಷಗಳು ತಮ್ಮ ವರ್ಚಸ್ಸು, ವಿಶ್ವಾಸ ಕಳೆದುಕೊಳ್ಳುತ್ತಿವೆ. ರಾಜ್ಯದ ಹಿತಾಸಕ್ತಿ ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಸಾಧ್ಯವಾಗಲಿದೆ ಎಂಬ ಅರಿವು ಜನತೆಗಾಗುತ್ತಿದೆ ಎಂದು ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅಭಿಪ್ರಾಯ ಪಟ್ಟರು.
ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷಗಳು ಸ್ವಂತ ಬೆಂಬಲದ ಮೇಲೆ ಅಧಿಕಾರ ಹಿಡಿಯುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷದ ಅನಿವಾರ್ಯತೆ ಕಂಡುಬರುತ್ತಿದೆ. ಜೆಡಿಎಸ್ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ, ಅದರಲ್ಲೂ ವಿಶೇಷವಾಗಿ ಪಕ್ಷ ಬಲಹೀನವಾಗಿರುವ ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಶಕ್ತಿ ತುಂಬುವ ನಿಮಿತ್ತ ತಾನು ಪ್ರವಾಸ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ. ಜಿಪಂ, ತಾಪಂ, ಸ್ಥಳೀಯ ಸಂಸ್ಥೆಗಳಲ್ಲಿ ತನ್ನ ಶಕ್ತಿಯನ್ನು ತೋರಿಸಿದೆ. ಆದರೂ ಕಾರ್ಯಕರ್ತರನ್ನು ಮುಂಬರುವ ವಿಧಾನಸಭಾ ಚುನಾವಣಾ ದೃಷ್ಟಿಯಿಂದ ಇನ್ನಷ್ಟು ಹುರಿದುಂಬಿಸುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿದ್ದೆನೆ ಎಂದರು. ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬೇಕು. ವಿಶೇಷವಾಗಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿದ ಕೀರ್ತಿ ಜೆಡಿಎಸ್‌ನದು. ಈ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗಾಗಿ ರಾಜ್ಯದಾದ್ಯಂತ ಪ್ರವಾಸ ನಡೆಸುತ್ತಿರುವುದಾಗಿ ತಿಳಿಸಿದರು.
ಕಾವೇರಿ ವಿವಾದದಿಂದ ಜೆಡಿಎಸ್‌ಗೆ ಹೆಚ್ಚಿನ ಮಹತ್ವ ಬಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷಕ್ಕೆ ಯಾವಾಗಲೂ ಮಹತ್ವವಿದೆ. ಆದರೆ ಕಾವೇರಿ ವಿವಾದದಲ್ಲಿ ರಾಜ್ಯದ ಪರ ನಿಂತು ಸರಕಾರಕ್ಕೆ ತಾನು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡಿದೆ. ಇದರಿಂದ ಹೋರಾಟಕ್ಕೆ ಹೊಸ ರೂಪ ಬಂದಿದೆ. ರಾಜ್ಯದ ಒಬ್ಬ ಹಿರಿಯ ನಾಯಕನಾಗಿ ತನ್ನ ಸಲಹೆಯನ್ನು ಸರಕಾರಕ್ಕೆ ನೀಡಿದ್ದೇನೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಶಾಸಕರಾದ ಮಧು ಬಂಗಾರಪ್ಪ, ಶಾರದಾ ಪೂರ್ಯ ನಾಯ್ಕಿ, ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಮುಖಂಡರಾದ ನಿರಂಜನ್, ಜಿ. ಮಾದಪ್ಪ, ಜಿಪಂ ಅಧ್ಯಕ್ಷೆ ಜ್ಯೋತಿ ಕುಮಾರ್, ಪಾಲಿಕೆ ಮತ್ತು ಜಿಪಂ ಸದಸ್ಯರು ಉಪಸ್ಥಿತರಿದ್ದರು.







