ಸರಕಾರಿ ಆಸ್ಪತ್ರೆಗಳಲ್ಲಿ ಜೆನರಿಕ್ ಔಷಧ ಕೇಂದ್ರಗಳ ಆರಂಭಕ್ಕೆ ಕ್ರಮ
ಮಾಸಿಕ ಕೆಡಿಪಿ ಸಭೆ

ಕಾರವಾರ, ಅ.19: ಕಡಿಮೆ ಬೆಲೆಯಲ್ಲಿ ಅಗತ್ಯ ಔಷಧಗಳು ಎಲ್ಲರಿಗೂ ಸಿಗುವಂತೆ ಮಾಡಲು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಆವರಣದಲ್ಲಿ ಜೆನರಿಕ್ ಔಷಧ ಕೇಂದ್ರ(ಜನೌಷಧ ಕೇಂದ್ರ)ಗಳಿಗೆ ಮಂಜೂರಾತಿ ದೊರೆತಿದ್ದು, ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಹೇಳಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಜನೌಷಧ ಕೇಂದ್ರಗಳಲ್ಲಿ ಅಗತ್ಯ ಔಷಧಗಳು ಮಾರುಕಟ್ಟೆ ದರಕ್ಕಿಂತ ಶೇ.75ರಷ್ಟು ಕಡಿಮೆ ಬೆಲೆಯಲ್ಲಿ ದೊರಕಲಿದೆ. ಜನೌಷಧ ಕೇಂದ್ರಗಳನ್ನು ಸರಕಾರಿ ಆಸ್ಪತ್ರೆಗಳ ಆವರಣದಲ್ಲಿ ಸರಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಶೋಕ್ ಕುಮಾರ್ ಹೇಳಿದರು.
ಬರಪೀಡಿತ ತಾಲೂಕು ಪ್ರಸ್ತಾವನೆ: ಸರಕಾರ ಹಳಿಯಾಳ ಮತ್ತು ಸಿದ್ದಾಪುರ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಈಗಾಗಲೇ ಘೋಷಿಸಿದೆ. ಶಿರಸಿ, ಯಲ್ಲಾಪುರ ಮತ್ತು ಮುಂಡಗೋಡು ತಾಲೂಕುಗಳಲ್ಲಿ ಸಹ ಮಳೆ ಪ್ರಮಾಣ ಕಡಿಮೆ ದಾಖಲಾಗಿದ್ದು, ಬರಪೀಡಿತ ತಾಲೂಕು ಪಟ್ಟಿಯಲ್ಲಿ ಸೇರಿಸುವಂತೆ ಕೋರಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಹೊನ್ನಪ್ಪಗೌಡ ತಿಳಿಸಿದರು.
ಬೆಳೆಹಾನಿ ಸಮೀಕ್ಷೆ ಕಾರ್ಯವನ್ನು ನಡೆಸಲಾಗಿದ್ದು, 25,500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಶೇ.33ರಷ್ಟು ಬೆಳೆ ಹಾನಿ ಉಂಟಾಗಿದೆ ಎಂದು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಬೆಳೆ ಹಾನಿ ಸಂಭವಿಸಿರುವ ರೈತರಿಗೆ ಇನ್‌ಪುಟ್ ಸಬ್ಸಿಡಿಯನ್ನು ಬಿಡುಗಡೆ ಮಾಡಿದರೆ ನೇರವಾಗಿ ರೈತರ ಬ್ಯಾಂಕು ಖಾತೆಗೆ ಜಮಾ ಮಾಡಲಾಗುವುದು. ಅಂಕೋಲಾದಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ 50ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಈ ಕುರಿತು ಸಮೀಕ್ಷೆ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.
ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ: ಜಿಲ್ಲೆಯ 1,571 ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಪ್ರತೀ ಅಂಗನವಾಡಿಗೆ ಫ್ಯಾನ್, ಸಿಎಫ್‌ಎಲ್ ಬಲ್ಬ್ ಒದಗಿಸಲಾಗುವುದು. ಇದೇ ರೀತಿ ಅಂಗನವಾಡಿಗಳಿಗೆ ಆವರಣ ಗೋಡೆ ನಿರ್ಮಿಸುವ ಕುರಿತು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಉದ್ಯೊಗ ಖಾತ್ರಿ ಯೋಜನೆಯಡಿ ಅಂಗನವಾಡಿಗಳಿಗೆ ಆವರಣ ಗೋಡೆ ನಿರ್ಮಿಸಬಹುದಾಗಿದೆ ಎಂದು ಅಧ್ಯಕ್ಷರು ತಿಳಿಸಿದರು. ಜಿಲ್ಲೆಯಲ್ಲಿ ಹೊಸದಾಗಿ 26 ಅಂಗನವಾಡಿಗಳು ಮಂಜೂ ರಾಗಿದ್ದು, ಈಗಾಗಲೇ 8 ಅಂಗನ ವಾಡಿಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಎಲ್ಲ ಅಂಗನವಾಡಿಗಳ ನಿರ್ಮಾಣ ಕಾರ್ಯವನ್ನು ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು ಎಂದರು.
ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಸೂಕ್ತ ಶೌಚಾಲಯ ವ್ಯವಸ್ಥೆ ಇಲ್ಲದಿರುವ ಕಾರಣ ತೊಂದರೆ ಉಂಟಾಗಿದ್ದು, ಈ ಕುರಿತು ಸಂಬಂಧಪಟ್ಟ ಸಮಿತಿ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅಧ್ಯಕ್ಷರು ತಿಳಿಸಿದರು.
ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ್, ಉಪಾಧ್ಯಕ್ಷ ಸಂತೋಷ ರೇಣಕೆ, ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮಣ ತಿಪ್ಪಣ್ಣ ಪಾಟೀಲ್, ಅಧಿಕಾರಿಗಳು ಉಪಸ್ಥಿತರಿದ್ದರು.







