ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನಾ ರ್ಯಾಲಿ

ಶಿವಮೊಗ್ಗ, ಅ. 20: ರಾಜ್ಯದಲ್ಲಿ ಮಳೆ ಕೊರತೆಯಿಂದ ಭೀಕರ ಬರಗಾಲ ಪರಿಸ್ಥಿತಿ ತಲೆದೋರಿದೆ. ಬೆಳೆ ನಷ್ಟಕ್ಕೆ ತುತ್ತಾಗಿ ತೀವ್ರ ಸಂಕಷ್ಟದಲ್ಲಿ ಸಿಲುಕಿರುವ ರೈತರ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡಬೇಕು. ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ಡಿ.ಸಿ. ಕಚೇರಿ ಆವರಣದಲ್ಲಿ ಧರಣಿ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಇತ್ತೀಚಿನ ವರ್ಷಗಳಿಗೆ ಹೋಲಿಕೆ ಮಾಡಿದರೆ ಪ್ರಸ್ತುತ ವರ್ಷ ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಮಾಣ ಅತ್ಯಂತ ಕಡಿಮೆಯಾಗಿದೆ. ಮಳೆಯ ಕೊರತೆಯಿಂದ ಪ್ರಮುಖ ಜಲಾಶಯ, ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗಿವೆ. ಇದರ ನೇರ ಪರಿಣಾಮ ಕೃಷಿ ಚಟುವಟಿಕೆಯ ಮೇಲೆ ಬೀರಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ. ನೀರಿನ ಕೊರತೆಯಿಂದ ಈಗಾಗಲೇ ರೈತರು ಅಪಾರ ಪ್ರಮಾಣದ ಬೆಳೆ ಕಳೆದುಕೊಂಡಿದ್ದಾರೆ. ಪ್ರಸ್ತುತ ಬಿಸಿಲ ಬೇಗೆಯ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ರೈತರು ಕಷ್ಟಪಟ್ಟು ಬೆಳೆದ ಬೆಳೆಯು ಒಣಗಿ ಹೋಗಲಾರಂಭಿಸಿದ್ದು, ವಿವಿಧ ರೀತಿಯ ರೋಗರುಜಿನಗಳಿಗೆ ತುತ್ತಾಗುವಂತಾಗಿದೆ. ಇದರಿಂದ ರೈತರು ಭಾರೀ ಪ್ರಮಾಣದ ನಷ್ಟ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರಾಜ್ಯದ ರೈತರ ನೆರವಿಗೆ ಧಾವಿಸಬೇಕು. ರೈತರ ಹಿತಾಸಕ್ತಿ ರಕ್ಷಣೆಗೆ ಅಗತ್ಯವಾದ ಎಲ್ಲ ರೀತಿಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ಎಲ್ಲ ರೀತಿಯ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವುದರ ಜೊತೆಗೆ ಸರಕಾರವೇ ನೇರವಾಗಿ ಖರೀದಿಸಬೇಕು. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಸಂಕಷ್ಟದಲ್ಲಿರುವ ರೈತರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು. ರೈತರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಕೆಲಸ ಮಾಡಬೇಕು ಎಂದು ಪ್ರತಿಭಟನಾಕಾರರು ಸಲಹೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರಾದ ಸುಮಾ ವಾಸುದೇವ, ನಾಗಕಿರಣ್ ಶೆಟ್ಟಿ, ಶಿವಕುಮಾರ್ ಸೂಡೂರು, ಚಂದ್ರು ಮಂಡಘಟ್ಟ, ರಂಜಿತ್, ಸುಭಾಷ್ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.







