ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕಾರಣ: ರಾಮಲಿಂಗಾ ರೆಡ್ಡಿ

ಉಡುಪಿ, ನ.4: ದೇಶದ ಸ್ವಾತಂತ್ರಕ್ಕಾಗಿ ಹೋರಾಟ ನಡೆಸಿದ ಏಕೈಕ ಪಕ್ಷ ಕಾಂಗ್ರೆಸ್. ಆಗ ಜೆಡಿಎಸ್, ಬಿಜೆಪಿ ಸೇರಿದಂತೆ ಯಾವುದೇ ಪಕ್ಷಗಳಿರಲಿಲ್ಲ. ಅಂದಿನಿಂದ ಇಂದಿನವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವೇ ಈ ದೇಶದ ಅಭಿವೃದ್ಧಿಗೆ ಕಾರಣ. ಉಳಿದ ಯಾವುದೇ ಪಕ್ಷಗಳು ಈ ದೇಶದಲ್ಲಿ ಸರಿಯಾದ ಆಡಳಿತ ನಡೆಸಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಉಡುಪಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಪಕ್ಷದ ಪದಾಧಿಕಾರಿ ಗಳು, ಮುಖಂಡರುಗಳು ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯ ಸರಕಾರ ಹಲವು ಜನಪರ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಕೆಎಸ್ಸಾರ್ಟಿಸಿ ಸಂಸ್ಥೆಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ 70 ಪ್ರಶಸ್ತಿಗಳು ಲಭಿಸಿವೆ. ಅದೇ ರೀತಿ ಸಾಲಮನ್ನಾ, ರಸ್ತೆ ಅಭಿವೃದ್ಧಿ ಸೇರಿದಂತೆ ಸಾಕಷ್ಟು ಕೆಲಸ ಕಾರ್ಯಗಳನ್ನು ರಾಜ್ಯ ಸರಕಾರ ಮಾಡಿದೆ. ಇದನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದರು.
ಈ ಸಂದರ್ಭ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ, ಮುಖಂಡರಾದ ಡಿ.ಕೆ.ಸುಧೀರ್, ವರೋನಿಕಾ ಕರ್ನೆಲಿಯೊ, ನರಸಿಂಹಮೂರ್ತಿ, ಜನಾರ್ದನ ತೋನ್ಸೆ, ಅಶೋಕ್ ಕುಮಾರ್ ಕೊಡವೂರು, ಕೇಶವ ಕೋಟ್ಯಾನ್, ಸುಧಾಕರ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.





