ನೋಟು ಅಮಾನ್ಯ: ನಾನು ಇನ್ನೇನು ಮಾಡಬೇಕು?
*ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಮಂಗಳೂರು, ನ.19: ಕೇಂದ್ರ ಸರಕಾರವು 500 ಮತ್ತು 1,000 ನೋಟು ಅಮಾನ್ಯಗೊಳಿಸಿದ ಹಿನ್ನೆಲೆಯಲ್ಲಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ನಾನು ಪ್ರಧಾನಿ, ವಿತ್ತ ಸಚಿವರು, ಆರ್‌ಬಿಐ ಗವರ್ನರ್‌ಗೆ ಪತ್ರ ಬರೆದಿದ್ದೇನೆ. ಅಲ್ಲಿಂದ ಈವರೆಗೆ ಯಾವುದೇ ಉತ್ತರ ಬಂದಿಲ್ಲ. ಉತ್ತರಿಸುವ ಸೌಜನ್ಯವನ್ನೂ ಅವರು ತೋರಲಿಲ್ಲ. ಹಾಗಾಗಿ ನಾನು ಇನ್ನೇನು ಮಾಡಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಕಚೇರಿ ಕಟ್ಟಡ ಉದ್ಘಾಟನೆಗಾಗಿ ಶನಿವಾರ ಮಂಗಳೂರಿಗೆ ಆಗಮಿಸಿದ ಅವರು ‘ನೋಟು ಅಮಾನ್ಯ’ ವಿಚಾರಕ್ಕೆ ಸಂಬಂಧಿಸಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಕಾಳಧನ ತಡೆಗಟ್ಟುವ ಸಂಕಲ್ಪ ಒಳ್ಳೆಯದೆ. ಆದರೆ, ಪೂರ್ವಸಿದ್ಧತೆ ಮಾಡಿಕೊಳ್ಳದ ಕಾರಣ ಜನಸಾಮಾನ್ಯರು ತತ್ತರಿಸಿದ್ದಾರೆ. ಇದನ್ನು ಕೇಂದ್ರ ಸರಕಾರ ಅರ್ಥಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಬರಪರಿಸ್ಥಿತಿ ಇರುವಾಗ ಮಂಗಳೂರಿನಲ್ಲಿ ಅದ್ದೂರಿಯ ಕಾಂಗ್ರೆಸ್ ಸಮಾವೇಶ ಹಮ್ಮಿಕೊಂಡ ಬಗ್ಗೆ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿಯ ಆಕ್ಷೇಪದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವವಿದೆ. ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಅಭಿವ್ಯಕ್ತಿಪಡಿಸಲು ಸ್ವತಂತ್ರರು. ಈ ಬಗ್ಗೆ ಹೆಚ್ಚೇನು ಪ್ರತಿಕ್ರಿಯಿಸಲಾರೆ ಎಂದರು.





