ಬಿಜೆಪಿ ಏಕತಾ ಸಮಾವೇಶಕ್ಕೆ ಉಡುಪಿ ಜಿಲ್ಲೆಯಿಂದ 3000 ಮಂದಿ ಕಾರ್ಯಕರ್ತರು
ಉಡುಪಿ ನ.25: ರವಿವಾರ ನ.27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾಗಳ ನೇತೃತ್ವದಲ್ಲಿ ನಡೆಯುವ ಬಿಜೆಪಿ ಕಾರ್ಯಕರ್ತರ ಏಕತಾ ಸಮಾವೇಶಕ್ಕೆ ಉಡುಪಿ ಜಿಲ್ಲೆಯಿಂದ ಕನಿಷ್ಟ 3,000 ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು. ಈ ಸಮಾವೇಶ ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿರುವುದರಿಂದ ಪಕ್ಷದ ಎಲ್ಲಾ ಪದಾಧಿಕಾರಿಗಳು, ಮೋರ್ಚಾ, ಪ್ರಕೋಷ್ಠಗಳ ಪ್ರಮುಖರು ಭಾಗವಹಿಸಬೇಕು ಎಂದು ನಿರ್ಧರಿಸಲಾಯಿತು. ಸಂಘಟನಾತ್ಮಕ ವಿಷಯಗಳ ಬಗ್ಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಯಶ್ಪಾಲ್ ಸುವರ್ಣ ಮಾಹಿತಿ ನೀಡಿದರು.
ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಶ್ಯಾಮಲಾ ಎಸ್. ಕುಂದರ್, ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಕಿರಣ್ ಕುಮಾರ್, ರಾಜೇಶ್ ಕಾವೇರಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರಭಾಕರ ಪೂಜಾರಿ, ಕಾಡೂರು ಸುರೇಶ ಶೆಟ್ಟಿ, ಬಿ. ರವಿ ಅಮೀನ್, ಕಟಪಾಡಿ ಶಂಕರ ಪೂಜಾರಿ, ಗೀತಾಂಜಲಿ ಸುವರ್ಣ, ಸಂಧ್ಯಾ ರಮೇಶ್, ಶಶಿಕಾಂತ ಪಡುಬದ್ರಿ, ರಾಘವೇಂದ್ರ ಉಪ್ಪೂರು, ಉಪಸ್ಥಿತರಿದ್ದರು.







