ತಕ್ಷಣ ದಿಡ್ಡಳ್ಳಿ ಆದಿವಾಸಿಗಳಿಗೆ ಪುನರ್ವಸತಿ: ಉಸ್ತುವಾರಿ ಸಚಿವ, ಜಿಲ್ಲಾಧಿಕಾರಿಗೆ ಸಿಎಂ ಸೂಚನೆ

ಬೆಂಗಳೂರು, ಡಿ.19: ಮಡಿಕೇರಿಯಲ್ಲಿ ಒಕ್ಕಲೆಬ್ಬಿಸಲಾಗಿರುವ ಆದಿವಾಸಿಗಳಿಗೆ ಪುನರ್ ವಸತಿ ಕಲ್ಪಿಸಲು ಅಲ್ಲಿನ ಜಿಲ್ಲಾಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸೋಮವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ ಸಂಘದ ವತಿಯಿಂದ ಆಯೋಜಿಸಿದ್ದ ನ್ಯಾಯಾಂಗ ಅಧಿಕಾರಿಗಳ ಸಮಾವೇಶದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಆದಿವಾಸಿಗಳ ಬೆತ್ತಲೆ ಪ್ರತಿಭಟನೆ ಸರಕಾರದ ಗಮನಕ್ಕೆ ಬಂದಿದೆ. ಕೂಡಲೇ ಅವರಿಗೆ ಪುನರ್ ವಸತಿ ಕಲ್ಪಿಸುವಂತೆ ಸ್ಥಳೀಯ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.
ಇತ್ತೀಚೆಗೆ ಆದಾಯ ತೆರಿಗೆ ದಾಳಿಗೆ ತುತ್ತಾದ ರಾಜ್ಯ ಸರಕಾರದ ಅಧಿಕಾರಿಗಳ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಸಿಬಿಐನವರು ನಮ್ಮನ್ನು ಹೇಳಿಕೇಳಿ ದಾಳಿ ಮಾಡುವುದಿಲ್ಲ. ದಾಳಿಗೆ ಒಳಗಾದವರು ನ್ಯಾಯಾಲಯಕ್ಕೆ ಹೋಗಲಿ ಎಂದು ಖಾರವಾಗಿ ಹೇಳಿದರು.
ಅಂತರರಾಜ್ಯ ಜಲವಿವಾದದ ಇತ್ಯರ್ಥಕ್ಕೆ ಏಕ ನ್ಯಾಯಾಧೀಕರಣ ರಚಿಸುವ ಕೇಂದ್ರ ಸರಕಾರ ಪ್ರಸ್ತಾವದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಖಚಿತ ಮಾಹಿತಿ ಸಿಕ್ಕ ನಂತರ ಪ್ರತಿಕ್ರಿಯಿಸುವುದಾಗಿ ತಿಳಿಸಿದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.







