ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಡಾ.ಮಾಧವಿ ಭಂಡಾರಿ ಸಮ್ಮೇಳನಾಧ್ಯಕ್ಷೆ

ಉಡುಪಿ, ಡಿ.29:ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಉಡುಪಿ ತಾಲೂಕು ಘಟಕದ ವತಿಯಿಂದ 10ನೇ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜ.7ರಂದು ಉಡುಪಿ ಅಂಬಲಪಾಡಿಯಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಸೌಧ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಘಟಕದ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ತಿಳಿಸಿದ್ದಾರೆ.
ಪ್ರಶಸ್ತಿ ವಿಜೇತ ಅನುವಾದಕಿ, ಸಾಹಿತಿ, ನಿವೃತ್ತ ಪ್ರಾಧ್ಯಾಪಕಿ ಡಾ.ಮಾಧವಿ ಎಸ್.ಭಂಡಾರಿ ಅವರು ಈ ಸಮ್ಮೇಳನದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ಎಂದು ವಸಂತಿ ಶೆಟ್ಟಿ ಅವರು ಇಂದಿಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜ.7ರಂದು ಬೆಳಕಗ್ಗೆ 8:00 ಗಂಟೆಗೆ ಉಡುಪಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಅವರು ಧ್ವಜಾರೋಹಣ ನೆರವೇರಿಸುವರು.
9:30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಖ್ಯಾತ ಗಾಯಕ ಹಾಗೂ ನಿವೃತ್ತ ಅಧ್ಯಾಪಕ ಹಾರ್ಯಾಡಿ ಚಂದ್ರಶೇಖರ ಕೆದ್ಲಾಯ ಅವರು ಉದ್ಘಾಟಿಸುವರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ಮಾತುಗಳನ್ನಾಡುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಮೀನಾಕ್ಷಿ ಮಾಧವ, ದ.ಕ.ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ವಾರ್ತಾಧಿಕಾರಿ ರೋಹಿಣಿ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳಿಕ 11:15ಕ್ಕೆ ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅಧ್ಯಕ್ಷತೆಯಲ್ಲಿ ‘ಮಹಿಳಾ ಸಬಲೀಕರಣ ಮತ್ತು ವಾಸ್ತವಿಕತೆ’ ವಿಷಯದ ಕುರಿತು ಹಾಗೂ ಅಪರಾಹ್ನ 2:00ರಿಂದ ಆಕಾಶವಾಣಿ ಮಂಗಳೂರು ನಿಲಯ ನಿರ್ದೇಶಕ ವಸಂತ ಕುಮಾರ್ ಪೆರ್ಲ ಅಧ್ಯಕ್ಷತೆಯಲ್ಲಿ ‘ಸಮೂಹ ಮಾಧ್ಯಮ ಮತ್ತು ಸಾಮಾಜಿಕ ಹೊಣೆಗಾರಿಕೆ’ ವಿಷಯದ ಕುರಿತು ಎರಡು ಗೋಷ್ಠಿಗಳು ನಡೆಯಲಿವೆ.
10ನೇ ವರ್ಷದ ಸಮ್ಮೇಳನ ದ್ಯೋತಕವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನಿಸಲಾಗುವುದು. ಅಲ್ಲದೇ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ ಎಂದು ವಸಂತಿ ಶೆಟ್ಟಿ ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಸೂರಾಲು ನಾರಾಯಣ ಮಡಿ, ಸುಬ್ರಹ್ಮಣ್ಯ ಶೆಟ್ಟಿ, ತಾಲೂಕು ಗೌರವ ಕೋಶಾಧಿಕಾರಿ ಎಚ್.ಸುದರ್ಶನ್ ಶೆಟ್ಟಿ ಉಪಸ್ಥಿತರಿದ್ದರು.







