ವೈದ್ಯರ ಮೇಲೆ ಹಲ್ಲೆ ಪ್ರಕರಣ :ಬಿಜೆಪಿಯ ಸಂಸದರು, ಶಾಸಕರಿಂದ ಗೂಂಡಾಗಿರಿ: ಯುವ ಕಾಂಗ್ರೆಸ್
ಕ್ರಮಕ್ಕೆ ಆಗ್ರಹಿಸಿ ಕಾರ್ಯಕರ್ತರಿಂದ ಧರಣಿ:

ಶಿವಮೊಗ್ಗ, ಜ. 10: ವೈದ್ಯರ ಮೇಲೆ ಹಲ್ಲೆ ನಡೆಸಿದ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಪಕ್ಷದ ಲೋಕಸಭಾ ಸದಸ್ಯ ಅನಂತ್‌ಕುಮಾರ್ ಹೆಗಡೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ನಗರದ ಶಿವಪ್ಪನಾಯಕ ವೃತ್ತದಲ್ಲಿ ಧರಣಿ ನಡೆಸಿದರು. ಸಂಸದ ಅನಂತ್‌ಕುಮಾರ್ ಹೆಗಡೆ ಈ ಹಿಂದೆಯೂ ಹಲವು ಬಾರಿ ಗೂಂಡಾ ವರ್ತನೆ ತೋರಿದ್ದು, ಇದು ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರಿಗೆ ಶೋಭೆ ತರುವಂಥದ್ದಲ್ಲ.
ಈಗಾಗಲೇ ಅವರ ಮೇಲೆ 9 ಕ್ರಿಮಿನಲ್ ಪ್ರಕರಣಗಳಿದ್ದು, ವೈದ್ಯರ ಮೇಲೆ ಹಲ್ಲೆ ನಡೆಸಿದ್ದಕ್ಕೆ ಮತ್ತೊಂದು ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ಬಿಜೆಪಿ ಸಂಸದರು ಹಾಗೂ ಶಾಸಕರು ಕಾನೂನು ಮೀರಿ ವರ್ತಿಸುತ್ತಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡುವುದು, ವೈದ್ಯರ ಮೇಲೆ ಹಲ್ಲೆ ನಡೆಸುವುದು, ಮನೆಗಳಿಗೆ ನುಗ್ಗಿ ದಾಂಧಲೆ, ಉದ್ರೇಕಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ. ಇಂತಹ ಘಟನೆಗಳಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್‌ಕುಮಾರ್ ಕಟೀಲುರವರು ಮಂಗಳೂರಿನಲ್ಲಿ ಕಾರ್ತಿಕ್ ರಾಜು ಎಂಬವರ ಕೊಲೆಗೆ ಸಂಬಂಧಪಟ್ಟಂತೆ ಪ್ರತಿಭಟನೆ ಮಾಡುವಾಗ ಪೊಲೀಸ್ ಠಾಣೆ ಎದುರಿನಲ್ಲೇ ಉದ್ರೇಕಕಾರಿ ಭಾಷಣ ಮಾಡುತ್ತಾ, ಇಡೀ ದಕ್ಷಿಣ ಕನ್ನಡ ಜಿಲ್ಲೆಗೇ ಬೆಂಕಿ ಇಡುತ್ತೇನೆಂದು ಬೊಬ್ಬೆ ಹಾಕಿದ್ದಾರೆ.
ಇಂತಹ ಕಿಡಿಗೇಡಿ ಸಂಸದರ ಮೇಲೆ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬಿಜೆಪಿ ಶಾಸಕ ರಾಜು ಕಾಗೆಯವರ ಕುಟುಂಬದವರು ವಿವೇಕ್ ಶೆಟ್ಟಿ ಎಂಬ ಯುವಕನ ಮನೆಗೆ ನುಗ್ಗಿ ದಾಂಧಲೆ ನಡೆಸಿ, ಮನಸೋ ಇಚ್ಛೆ ಹಲ್ಲೆ ನಡೆಸಿ ಆವರನ್ನು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಬಿಜೆಪಿಯವರು ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ನಮ್ಮ ಉಸಿರು, ನಾವೇ ಅದರ ವಾರಸುದಾರರು ಎಂದು ಹೇಳಿಕೊಳ್ಳುತ್ತಿರುತ್ತಾರೆ. ಆದರೆ ಅವರ ಪಕ್ಷದ ಕೆಲ ಸಂಸದರು, ಶಾಸಕರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದಾರೆ. ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ.
ಇಂತಹವರನ್ನು ಜನಪ್ರತಿನಿಧಿ ಹುದ್ದೆಯಿಂದ ವಜಾಗೊಳಿಸಿ ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಎಂ. ಪ್ರವೀಣ್‌ಕುಮಾರ್, ಪ್ರಮುಖರಾದ ಟಿ. ವಿ. ರಂಜಿತ್, ಎಚ್. ಪಿ. ಗಿರೀಶ್, ವಸಂತ, ಚೇತನ್, ಆರ್. ಕಿರಣ್, ನಯಾಝ್, ಲೋಕೇಶ್ ಮೊದಲಾದವರಿದ್ದರು.







