ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ರೈಲು ಸಂಪರ್ಕ: ಸಚಿವ ಜಾರ್ಜ್

ಬೆಂಗಳೂರು, ಜ. 12: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಗರದಿಂದ ಸಂಪರ್ಕ ಕಲ್ಪಿಸಲು ಮೆಟ್ರೋ ರೈಲು ಯೋಜನೆಗೆ ಕೇಂದ್ರ ಸರಕಾರ ಸಮ್ಮತಿ ಸೂಚಿಸಿದ್ದು, 6 ಸಾವಿರ ಕೋಟಿ ರೂ.ವೆಚ್ಚದ ಈ ಯೋಜನೆಗೆ ಕೇಂದ್ರ ನೆರವಿನ ಭರವಸೆ ದೊರೆತಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜಯಂತ್ ಸಿನ್ಹಾ ಅವರೊಂದಿಗೆ ಈ ಸಂಬಂಧ ಸಮಾಲೋಚನೆ ನಡೆಸಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಬೆಂಗಳೂರು ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 30ಕಿ.ಮೀ.ಉದ್ದದ ಮೆಟ್ರೋ ರೈಲು ಸಂಪರ್ಕದ ಬಗ್ಗೆ ಕೇಂದ್ರ ಸಚಿವ ಜಯಂತ್ ಸಿನ್ಹಾ ಅವರೊಂದಿಗೆ ಚರ್ಚೆ ನಡೆಸಿದ್ದೇವೆ. ಪ್ರಸ್ತುತ 6 ಮಾರ್ಗಗಳನ್ನು ಮೆಟ್ರೋ ರೈಲ್ವೆ ಸಂಪರ್ಕಕ್ಕೆ ಗುರುತಿಸಿದ್ದು, ಆ ಪೈಕಿ ಒಂದು ಮಾರ್ಗವನ್ನು ಅಂತಿಮಗೊಳಿಸಿ ಕೇಂದ್ರಕ್ಕೆ ಒಪ್ಪಿಗೆ ಕಳುಹಿಸಲಾಗುವುದು ಎಂದು ಮಾಹಿತಿ ನೀಡಿದರು.
ಉದ್ದೇಶಿತ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಜಂಟಿ ಸಹಭಾಗಿತ್ವದಲ್ಲಿ ಶೇ.50ಃ50ರ ಅನುಪಾತದಲ್ಲಿ ಅನುದಾನ ಒದಗಿಸಲಾಗುವುದು ಎಂದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಯೋಜನೆ ಮಾರ್ಗದ ಬಗ್ಗೆ ಒಂದು ಮಾರ್ಗ ಅಂತಿಮಗೊಳಿಸಲಾಗುವುದು ಎಂದರು.
ಮೆಟ್ರೋ ರೈಲು ಯೋಜನೆಗೆ ಆರು ಸಾವಿರ ಕೋಟಿ ರೂ.ವೆಚ್ಚವಾಗಲಿದ್ದು, ಕೇಂದ್ರ ಸಚಿವರು ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದ ಅವರು, ಬೆಂಗಳೂರು ನಗರಕ್ಕೆ ಸಬ್‌ಅರ್ಬನ್ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಬಗ್ಗೆಯೂ ಚರ್ಚಿಸಲಾಗಿದೆ ಎಂದರು.
360 ಕೋಟಿ ರೂ.ವೆಚ್ಚದಲ್ಲಿ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರಮುಖ ಪಟ್ಟಣಗಳನ್ನು ಸಂಪರ್ಕಿಸುವ ಆರು ಸಬ್‌ಅರ್ಬನ್ ರೈಲುಗಳನ್ನು ಓಡಿಸಲು ಚಿಂತನೆ ನಡೆದಿದೆ. ಸಬ್ ಅರ್ಬನ್ ರೈಲು ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಾರ್ಜ್ ಇದೇ ವೇಳೆ ತಿಳಿಸಿದರು.
ಸಭೆಯಲ್ಲಿ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಕರೋಲ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಕುಮಾರ್ ಖತ್ರಿ, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.







